ಮಂಗಳೂರು: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೋಮವಾರ (ಆ.18) ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಅವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಸೋಮವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯಬೇಡಿ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೋಮವಾರ (18-08-2025) ರಜೆಯನ್ನು ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರತಕ್ಕದ್ದು. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳಬಾರದು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ- 1077 /24*7, 0824 2442590 ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.
ಉಡುಪಿಗೂ ರೆಡ್ ಅಲರ್ಟ್, ಶಾಲೆಗೆ ರಜೆ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಸೂಚಿಸಿದೆ. ಅದರಂತೆ, ಆ.18 ಮತ್ತು 19ರಂದು ಎರಡು ದಿನ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಣೆ ಮಾಡಿದ್ದಾರೆ.
ಈ ಎರಡು ದಿನ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ ಗಾಳಿ ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಎಂದು ಸೂಚಿಸಲಾಗಿದೆ.
Laxmi News 24×7