ಬೆಂಗಳೂರು: ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಂಬಂಧ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ, ನಟ ಅನಿರುದ್ಧ್ ಅವರು, ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗವನ್ನು ಮೀಸಲಿಡಬೇಕು. ವಿಷ್ಣು ಹುಟ್ಟುಹಬ್ಬದ ಒಳಗೆ ಸರ್ಕಾರ ಭೂಮಿಗೆ ಅನುಮತಿ ನೀಡಬೇಕು. ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಕೊಡಬೇಕು ಎಂದು ಅವರು ಮನವಿ ಮಾಡಿದರು.
ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ನಟಿ ಭಾರತಿ ವಿಷ್ಣುವರ್ಧನ್, ”ಅಭಿಮಾನಿಗಳಿಗಾಗಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ಕೇಳಿದ್ದೇವೆ. ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ, ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ , ಸಚಿವ ಬೈರತಿ ಸುರೇಶ್ ಇತರರು (X@siddaramaiah)
”ನಟ ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಕೊಡಿ ಎಂದು ನಾನು ಕೇಳಲ್ಲ. ಆದರೆ ಅಭಿಮಾನಿಗಳು ಕೇಳುತ್ತಿದ್ದಾರೆ. ಅವರಿಗಾಗಿ ಕರ್ನಾಟಕ ರತ್ನ ಕೊಡಬೇಕಿದೆ” ಎಂದು ಅವರು ಪ್ರತಿಕ್ರಿಯಿಸಿದರು.
Laxmi News 24×7