ನವದೆಹಲಿ/ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ತತ್ತರಿಸಿದ್ದ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಕೇಂದ್ರ ಅನುಮತಿ ನೀಡಿದೆ.
2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೇಂದ್ರ ಕೃಷಿ ಸಚಿವರು ಖುದ್ದು ಪತ್ರ ಬರೆದು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ಮುಂಗಾರಿನಲ್ಲಿ ಕರ್ನಾಟಕದ ಬೆಳೆಗಾರರು ಅತಿವೃಷ್ಟಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ನೆರವಾಗುವಂತೆ ಕೋರಿ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ್ ಅವರಿಗೆ ಪತ್ರ ಬರೆದಿದ್ದರು.
ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ತಕ್ಷಣವೇ ಕರ್ನಾಟಕದ ರೈತರ ನೆರವಿಗೆ ಮುಂದಾಗುವಂತೆ ತಿಳಿಸಿದ್ದರು.
ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರು ತಮ್ಮ ಮನವಿಗೆ ತ್ವರಿತ ಸ್ಪಂದನೆ ನೀಡಿ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ಈ ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಸಹ ನೀಡಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ತಿಳಿಸಿದ್ದಾರೆ.
Laxmi News 24×7