ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸೆಪ್ಟೆಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್, ವಿ ಕೆ ಫಿಲ್ಮ್ಸ್ ಮತ್ತು ಸಿನಿಪ್ಲೆಕ್ಸ್ ಪ್ರೈವೆಟ್ ಲಿಮಿಟೆಡ್ ಹೈಕೋರ್ಟ್ಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಅರ್ಜಿಗಳ ಭಾಗವಾಗಿ ಮಧ್ಯಂತರ ಕೋರಿಕೆಗೆ ಸಂಬಂಧಿಸಿದ ವಿಚಾರಣೆ ನಡೆಸಿ, ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿದೆ.