Breaking News

ಮತ್ತೊಂದು ಹುಲಿ ಹತ್ಯೆ: ತನಿಖೆಗೆ ಅರಣ್ಯ ಸಚಿವ ಖಂಡ್ರೆ ಆದೇಶ

Spread the love

ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆಯಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ಗುರುವಾರ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಈ ಅರಣ್ಯದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತಿ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ತಾಕೀತು ಮಾಡಿದ್ದಾರೆ.

ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ವನ್ಯಜೀವಿ ಸಪ್ತಾಹದ ದಿನವಾದ 2ನೇ ಅಕ್ಟೋಬರ್ 2025ರಂದು ಹುಲಿಯ ಅರ್ಧ ಕಳೇಬರವೊಂದು ಪತ್ತೆಯಾಗಿದೆ. ಹುಲಿಯ ತಲೆ, ಭುಜ ಮುಂದಿನ ಕಾಲುಗಳು ಮಾತ್ರ ಪತ್ತೆಯಾಗಿದ್ದು, ಉಳಿದ ಭಾಗಗಳು ನಾಪತ್ತೆಯಾಗಿರುವುದು ತಿಳಿದುಬಂದಿದೆ. ಇದೊಂದು ಕಳ್ಳಬೇಟೆ ಪ್ರಕರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ವನ್ಯಜೀವಿ ಧಾಮದಲ್ಲಿ ಈ ಹಿಂದೆಯೂ ವನ್ಯಜೀವಿಗಳ ಕಳ್ಳಬೇಟೆ ಪ್ರಕರಣಗಳು ವರದಿಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಬರೆದ ತಮ್ಮ ಟಿಪ್ಪಣಿಯಲ್ಲಿ ಸಚಿವರು ತಿಳಿಸಿದ್ದಾರೆ.

ಇದು ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು, ಕೂಡಲೇ ಪಿಸಿಸಿಎಫ್ ಸ್ಮಿತಾ ಬಿಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಈ ಕಾನನದಲ್ಲಿ ಕಳೆದ 3 ವರ್ಷಗಳಲ್ಲಿ ದಾಖಲಾಗಿರುವ ಎಲ್ಲ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆ ಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ