ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆಯಿತು.
ಗೌತಮ್ ಆತ್ಮಹತ್ಯೆ ಮಾಡಿಕೊಂಡವ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಗೌತಮ್ ಕೆ.ಆರ್.ಪುರ ಆಕಾಶನಗರದ ನಿವಾಸಿಯಾಗಿದ್ದು, ಈತನ ಸಂಬಂಧಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಪೊಲೀಸರು ಕಳೆದ ಏಪ್ರಿಲ್ನಲ್ಲಿ ಬಂಧಿಸಿ ಜೈಲಿಗೆ ಕಳಿಸಿದ್ದರು.
3ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಿಗದಿಯಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಗೌತಮ್ ಜೊತೆಗೆ ಮತ್ತೊಂದು ಪ್ರಕರಣದ ಆರೋಪಿಯನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗ್ಗೆ ನ್ಯಾಯಾಲಯಕ್ಕೆ ಕರೆತಂದಿದ್ದರು.
ಆರೋಪಿಗಳನ್ನು ಕೈಕೊಳ ಧರಿಸಿಯೇ ಕೋರ್ಟ್ಗೆ ಕರೆತರಲಾಗಿತ್ತು. ಬಳಿಕ ಕೋರ್ಟ್ ಹಾಲ್‌ನಲ್ಲಿ ಕೈಕೊಳವನ್ನು ಪೊಲೀಸರು ಬಿಚ್ಚಿದ್ದರು. ವಿಚಾರಣೆ ಮುಗಿಸಿ ಹೊರಬಂದ ಗೌತಮ್, ಕುಟುಂಬಸ್ಥರನ್ನು ಕಂಡು ತೀರ ಬೇಸರಕ್ಕೆ ಒಳಗಾಗಿದ್ಧಾನೆ. ಏಕಾಏಕಿ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Laxmi News 24×7