ಕಾರವಾರ(ಉತ್ತರ ಕನ್ನಡ): ಜಿಲ್ಲೆಯ ಕಾರವಾರದಲ್ಲಿ ಅತಿ ವಿರಳ ಘಟನೆಯಲ್ಲಿ ಕಾಂಡೈ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರನೊಬ್ಬ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಮತ್ತು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್ ಮೃತ ಯುವಕ. ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.
ಮೀನುಗಾರಿಕೆ ನಡೆಸುತ್ತಿದ್ದಾಗ ನೀರಿನಿಂದ ಸುಮಾರು 8 ರಿಂದ 10 ಇಂಚು ಉದ್ದದ ಕಾಂಡೈ ಮೀನೊಂದು ಅನಿರೀಕ್ಷಿತವಾಗಿ ದೋಣಿಯೊಳಗೆ ಹಾರಿ ಬಂದಿದೆ. ಈ ಮೀನು ನೇರವಾಗಿ ಅಕ್ಷಯನ ಹೊಟ್ಟೆಗೆ ಚುಚ್ಚಿದ್ದು, ಆತನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಗೊಂಡ ಅಕ್ಷಯನನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಸಾವು: ಆಸ್ಪತ್ರೆಯಲ್ಲಿ ಗಾಯದ ಭಾಗಕ್ಕೆ ಹೊಲಿಗೆ ಹಾಕಿ, ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದರೆ, ನೋವು ಕಡಿಮೆ ಆಗದ ಕಾರಣ ಬುಧವಾರ (ಅ.15) ಅಕ್ಷಯ ಮರಳಿ ಆಸ್ಪತ್ರೆಗೆ ದಾಖಲಾಗಿದ್ದನು. ಆದರೆ, ಗುರುವಾರ (ಅ.16) ಬೆಳಗಿನ ಜಾವ ಸುಮಾರು 5 ಗಂಟೆ ಸುಮಾರಿಗೆ ಅಕ್ಷಯ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದನು. ಮೀನಿನ ಮೂತಿಯಿಂದ ಚುಚ್ಚಿದ ಪರಿಣಾಮ ಅಕ್ಷಯನ ಕರುಳಿಗೆ ಗಂಭೀರ ಗಾಯವಾಗಿರುವುದೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.
Laxmi News 24×7