ಬೆಂಗಳೂರು : ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ದವಾಗಿ ನಡೆಸಲು ಅನುಮತಿ ನೀಡಲು ಮಾರ್ಗಸೂಚಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಿ ಸ್ಥಳಗಳು, ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಇದೀಗ ಸಚಿವ ಸಂಪುಟ ಸಭೆ ಸಾರ್ವಜನಿಕ ಸ್ಥಳ, ಸರ್ಕಾರಿ ಶಾಲೆಗಳ ಮೈದಾನಗಳ ಸದ್ಬಳಕೆ ಮಾಡುವ ಸಂಬಂಧ ಸ್ಪಷ್ಟ ನೀತಿ ನಿಯಮಗಳೊಳಗೊಂಡ ವಿಸ್ತೃತ ಸರ್ಕಾರಿ ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.ಪೊಲೀಸ್ ಮಹಾನಿರ್ದೇಶಕರು 15.10.2025ರ ಪತ್ರದಲ್ಲಿ, ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ / ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘ ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವ ಕುರಿತು ಪ್ರಸ್ತಾಪಿಸಿದ್ದಾರೆ.
Laxmi News 24×7