ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಅಲ್ಲದೇ, ಪ್ರಕರಣ ಸಂಬಂಧ ಪ್ರಕರಣದಲ್ಲಿ ದೂರು ದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರುಗಳಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಇದೇ ವೇಳೆ ಪೊಲೀಸರಿಗೆ ಸೂಚನೆ ನೀಡಿದೆ.
ಶವಗಳನ್ನು ಹೂತ್ತಿಟ್ಟಿದ್ದಾರೆ ಎನ್ನಲಾದ ಆರೋಪ ಬಹುತೇಕ ಸುಳ್ಳು ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಎಸ್ಐಟಿ ಪೊಲೀಸರು, ಆ ಪ್ರಕರಣದ ತನಿಖೆ ಕೈ ಬಿಟ್ಟು ನಾಲ್ವರು ದೂರುದಾರರ ವಿರುದ್ಧವೇ ಪ್ರಕರಣ ದಾಖಲಿಸಿ ನಡೆಸುತ್ತಿದ್ದ ತನಿಖೆಗೂ ಇದೀಗ ತಡೆ ಬಿದ್ದಂತಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ (ಎಫ್ಐಆರ್39/2025) ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೇ, ಪ್ರಕರಣದ ತನಿಖೆಗೆ ನವೆಂಬರ್ 12ರವರೆಗೆ ತಡೆ ನೀಡಿದೆ. ಜೊತೆಗೆ, ಅರ್ಜಿದಾರರಿಗೆ ಕಿರುಕುಳ ನೀಡದಂತೆ ಪೊಲೀಸರಿಗೆ ನಿರ್ದೇಶನ ನೀಡಿತು. ಎಸ್ಐಟಿ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರನ್ನು ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ನೀಡಬೇಕು ಎಂದು ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.
ಇದಕ್ಕೂ ಮುನ್ನ ವಾದ ಮಂಡಿಸಿದ ವಕೀಲರು, ”ಅರ್ಜಿದಾರರಿಗೆ ಈಗಾಗಲೇ 9 ಬಾರಿ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಎಫ್ಐಆರ್ನಲ್ಲಿ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್ಆ್ಯಪ್, ಇಮೇಲ್ ಮೂಲಕ ಜಾರಿ ಮಾಡಿದ್ದಾರೆ. ಬಿಎನ್ಎಸ್ಎಸ್ ಸೆಕ್ಷನ್ 35(3) ಅಡಿ ಸಮನ್ಸ್ ನೀಡಲಾಗಿದೆ. ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನುಬಾಹಿರ. ಅರ್ಜಿದಾರರು ಆರೋಪಿಗಳೂ ಅಲ್ಲ, ಸಾಕ್ಷಿಗಳೂ ಅಲ್ಲ. ಹಾಗಾಗಿ, ನೋಟಿಸ್ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದರು.
Laxmi News 24×7