ಬೆಂಗಳೂರು/ಮೈಸೂರು/ಹುಬ್ಬಳ್ಳಿ: ದೆಹಲಿಯಲ್ಲಿ ಭೀಕರ ಕಾರು ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ಸೋಮವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಟ್ಟೆಚ್ಚರ: ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ಚೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಆರ್ಪಿಎಫ್ನಿಂದ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು. ಶ್ವಾನದಳ ಮತ್ತು ಮೆಟಲ್ ಡಿಟೆಕ್ಟರ್ ಮೂಲಕ ಪ್ರಯಾಣಿಕರ ಲಗೇಜ್ ಇತ್ಯಾದಿ ತಪಾಸಣೆ ಮಾಡಲಾಯಿತು. ಅಲ್ಲದೆ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ಕೂಡ ಪೊಲೀಸರು ನಿಗಾ ವಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, “ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ನಮ್ಮ ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಡಾಗ್ ಸ್ಕ್ವಾಡ್ ಮೂಲಕ ತಪಾಸಣೆ ಮಾಡಲಾಗಿದೆ. ಈಗಾಗಲೇ ಸಿಬ್ಬಂದಿ ನೇಮಕ ಮಾಡಲಾಗಿದೆ. ವಾಹನ ತಪಾಸಣೆ ಕೂಡಾ ನಡೆಸಲಾಗುತ್ತಿದೆ. ಧಾರ್ಮಿಕ ಕೇಂದ್ರ, ಜನ ಸಂದಣಿ ಪ್ರದೇಶಗಳ ಮೇಲೆ ನಿಗಾವಹಿಸಿದ್ದೇವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಪಾಸಣೆ ಮಾಡಲಾಗುವುದು” ಎಂದರು.
Laxmi News 24×7