ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.
ಬೆಳಗಾವಿ ನಗರದಲ್ಲಿರುವ ಕೆಎಸ್ಸಿಎ ಮೈದಾನಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಘಟನೆ ಬಳಿಕ ಯಾವುದೇ ಪಂದ್ಯ ನಡೆದಿಲ್ಲ. ಈ ಹಿನ್ನೆಲೆಯಲ್ಲಿ, ನಗರದಲ್ಲಿ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಡನೆ ಸುದೀರ್ಘ ಚರ್ಚೆ ಮಾಡಲಾಗಿದೆ. ಅವರಿಂದ ಸಕಾರಾತ್ಮಕವಾಗಿ ಸ್ಪಂದನೆ ದೊರಕಿದೆ ಎಂದರು.
ಅಂದು ನಡೆದ ಘಟನೆಯಲ್ಲಿ ಅಸೋಸಿಯೇಷನ್ ಕಡೆಯಿಂದ ಯಾವುದೇ ತಪ್ಪಾಗಿಲ್ಲ. ಅಭಿಮಾನಿಗಳ ಸಂಭ್ರಮದ ವೇಳೆ ನಡೆದ ಘಟನೆ ಅದಾಗಿದೆ. ಹೀಗಾಗಿ, ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ಆಯೋಜನೆಗೆ ಅನುಮತಿ ಕೊಡುವಂತೆ ವಿನಂತಿಸಿದ್ದೇವೆ ಎಂದು ಹೇಳಿದರು.
ಸಂಪುಟ ಸಭೆಯಲ್ಲಿ ಚರ್ಚಿಸುವ ಭರವಸೆ: ನಮ್ಮ ಮನವಿಗೆ ಸ್ಪಂದಿಸಿರುವ ಸಿಎಂ, ಡಿಸಿಎಂ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಲಾಗಿದೆ. ಅಲ್ಲದೇ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ವೆಂಕಟೇಶ್ ಪ್ರಸಾದ್ ಮಾಹಿತಿ ನೀಡಿದರು.
Laxmi News 24×7