ಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟರು.
ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿರುವ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಶೇ.60ರಷ್ಟು ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ. ಇನ್ನು ನೀರಿನ ನಿರ್ವಹಣೆ ಕುರಿತು ಪ್ರತಿಯೊಬ್ಬರು ತಿಳಿದುಕೊಂಡು ನೀರನ್ನು ಮಿತವಾಗಿ ಬಳಸಬೇಕು. ಈ ಕುರಿತು ಕೃಷಿ ಇಲಾಖೆ ಪ್ರತಿ ರೈತರ ಹತ್ತಿರ ಹೋಗಿ ಇಲಾಖೆಯಿಂದ ಪರಿಚಯಿಸಲಾಗುವ ಹೊಸ ತಳಿಗಳ ಕುರಿತು ಮಾಹಿತಿ ನೀಡಬೇಕು. ಕಳೆದ ಆಯವ್ಯಯಲ್ಲಿ ಘೋಷಿಸಿದಂತೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ ಎಂದರು.
ರೈತರು ಕೃಷಿಯಲ್ಲಿ ವೈಜ್ಞಾನಿಕ, ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಬ್ಸಿಡಿ ಮೂಲಕ ಹೊಸ ಯಂತ್ರೋಪಕರಣಗಳನ್ನು ವಿತರಿಸುತ್ತಿದೆ. ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ ಮಾಡಲಾಗುತ್ತಿದೆ. ಅಲ್ಲಿನ ರೈತರು ಕೃಷಿ ಇಲಾಖೆಯಿಂದ ಜಾರಿಯಲ್ಲಿರುವ ಸಾಕಷ್ಟು ಯೋಜನೆಗಳನ್ನು ಪಡೆದು ಅಭಿವೃದ್ಧಿಪರ ಕೃಷಿ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿ ಕ್ಷೇತ್ರಗಳಿಗೆ ಭೇಟಿ ನೀಡಿ ರೈತರಿಗೆ ಹೊಸ ಹೊಸ ತಂತ್ರಜ್ಞಾನ ಬಳಕೆ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು. ಕೃಷಿಯನ್ನು ಲಾಭದಾಯಕವ್ನಾಗಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.
Laxmi News 24×7