ಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಹಾಗೂ ಹೆಡ್ ಕಾನ್ಸ್ಟೇಬಲ್ ಅಶೋಕ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಅವರ ವಿರುದ್ಧ ‘ಡ್ರಿಂಕ್ ಆ್ಯಂಡ್ ಡ್ರೈವ್’ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಲ್ಲಿ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ದೃಢಪಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಿಯಮ ಉಲ್ಲಂಘಿಸಿದ ಅಧಿಕಾರಿಯ ನಡೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಸಿಪಿಐ ವಿರುದ್ಧ ಕೇವಲ ಮದ್ಯಪಾನದ ಆರೋಪವಷ್ಟೇ ಅಲ್ಲದೆ, ಹಣಕಾಸಿನ ಅಕ್ರಮದ ದೂರುಗಳೂ ಕೇಳಿಬಂದಿವೆ. ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣವೊಂದರಲ್ಲಿ ಸಾರ್ವಜನಿಕರಿಂದ ವಸೂಲಿ ಮಾಡಿದ್ದ 15 ಸಾವಿರ ರೂ. ದಂಡದ ಹಣವನ್ನು ನ್ಯಾಯಾಲಯಕ್ಕೆ ಪಾವತಿಸದೆ ಅಧಿಕಾರಿಗಳೇ ಲಪಟಾಯಿಸಿದ್ದಾರೆ ಎಂಬ ಆರೋಪ ಸಾಬೀತಾಗಿದೆ. ಅಲ್ಲದೆ, ದನ ಸಾಗಾಟಗಾರರೊಂದಿಗೆ ಸಂಪರ್ಕ ಹೊಂದಿದ್ದ ಹಾಗೂ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಬಗ್ಗೆಯೂ ಇವರ ವಿರುದ್ಧ ದೂರುಗಳಿದ್ದವು. ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆ ತಿದ್ದಿಕೊಳ್ಳದ ಹಿನ್ನೆಲೆಯಲ್ಲಿ ಈ ಶಿಸ್ತುಕ್ರಮ ಜರುಗಿಸಲಾಗಿದೆ ಎಂದು ಎಸ್‌ಪಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
Laxmi News 24×7