ಬೆಂಗಳೂರು: ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
20 ಸಾವಿರ ಸಿಬ್ಬಂದಿ: ನಗರದಲ್ಲಿ ಹೊಸ ವರ್ಷಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ವಿಭಾಗದ 14 ಸಾವಿರ ಪೊಲೀಸರು, 2,500 ಸಂಚಾರ ಪೊಲೀಸರು, 88 ಕೆಎಸ್ಆರ್‌ಪಿ ತುಕಡಿಗಳು, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳನ್ನ ನಿಯೋಜನೆ ಮಾಡಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಿವಿಲ್ ಡಿಫೆನ್ಸ್, ಗೃಹರಕ್ಷಕ ದಳ ಸೇರಿದಂತೆ ಒಟ್ಟು 20 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿ.ಪರಮೇಶ್ವರ್ ವಿವರಿಸಿದರು.
ಹೊಸ ವರ್ಷದ ಆಚರಣೆಯಲ್ಲಿ ಹೆಚ್ಚಿನ ಜನ ಭಾಗವಹಿಸುತ್ತಿದ್ದಾರೆ. ಕಳೆದ ವರ್ಷ 8 ಲಕ್ಷಕ್ಕೂ ಹೆಚ್ಚು ಜನರು ಸಂಭ್ರಮಾಚರಣೆಗಳಲ್ಲಿ ಭಾಗವಹಿಸಿದ್ದರು. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ. ಹಿಂದಿನ ವರ್ಷದ ಅನುಭವದ ಆಧಾರದಲ್ಲಿ ಈ ಸ್ಥಳಗಳನ್ನು ಗುರುತಿಸಲಾಗಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎಂದು ಅಂದಾಜಿಸಲಾಗಿದ್ದು, ಸುಮಾರು 10 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆಯಿದೆ ಎಂದರು.
Laxmi News 24×7