ಬೆಂಗಳೂರು: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್ಎಸ್ಎಲ್ಸಿ ಟಾಪರ್ಗಳಿಗೆ ಲ್ಯಾಪ್ಟಾಪ್ ಬದಲಿಗೆ ನಗದು ಬಹುಮಾನ ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ.
2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ನಗದು ಬಹುಮಾನಕ್ಕೆ ಅರ್ಹರಾಗಿದ್ದಾರೆ.
ವಿದ್ಯಾರ್ಥಿಗಳ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ‘ಗುಣಮಟ್ಟದ ಭರವಸೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಉಪಕ್ರಮ’ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಸುಮಾರು 325 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಇಲಾಖೆ ತಿಳಿಸಿದೆ.
ಮಕ್ಕಳ ದಿನಾಚರಣೆ ಸಂದರ್ಭದಲ್ಲಿಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಆ ನಂತರ, ಸರ್ಕಾರ ಇದೀಗ ಆದೇಶ ಹೊರಡಿಸಿದೆ. ತಮಗೆ ದೊರೆತ ಬಹುಮಾನವನ್ನು ಹೇಗೆ ಬಳಸಿಕೊಳ್ಳಬೇಕೆಂಬ ಸ್ವಾತಂತ್ರ್ಯ ವಿದ್ಯಾರ್ಥಿಗಳಿಗೆ ನೀಡಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲ್ಯಾಪ್ಟಾಪ್ ನೀಡುವ ಬದಲು ನಗದು ಬಹುಮಾನ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆ ಮತ್ತು ಪ್ರಯೋಜನ ದೊರಕಲಿದೆ ಎಂದು ಶಾಲಾ ಹಾಗೂ ಶಿಕ್ಷಣ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
Laxmi News 24×7