Breaking News

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ – ನಾಗರಹೊಳೆ ಸಫಾರಿ ಆರಂಭಿಸಿ: ಡಿಕೆಶಿ ಸೂಚನೆ

Spread the love

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೇಕೆದಾಟು ಯೋಜನೆಗೆ ಸಣ್ಣ ಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್‌ನಲ್ಲಿ  ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳು ಇವೆಯಾ ಎಂದು ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸಲು ಸೂಚಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ಪ್ರದೇಶಗಳಲ್ಲಿ ಹುಲಿಗಳು ಮತ್ತು ಚಿರತೆಗಳ ಸಾಂದ್ರತೆ, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಿಗಿಂತ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಚಟುವಟಿಕೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಬಿಎಂಐಸಿ ಕಾರಿಡಾರ್‌ ನಿರ್ಮಾಣದಿಂದ ಆನೆ, ಹುಲಿ ಹಾಗೂ ಚಿರತೆಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಇದರ ಪರಿಣಾಮವಾಗಿ ವನ್ಯಜೀವಿಗಳು ಅರಣ್ಯ ಪ್ರದೇಶಗಳಿಂದ ಹೊರಬಂದು ಚನ್ನಪಟ್ಟಣ ಹಾಗೂ ರಾಮನಗರ ಭಾಗಗಳತ್ತ ಚಲಿಸುತ್ತಿದ್ದು, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗಲು ಇದೂ ಪ್ರಮುಖ ಕಾರಣವಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ಅಧಿಕಾರಿಗಳ ಪ್ರಕಾರ, ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಗತ್ಯ ಅಂಡರ್‌ಪಾಸ್‌, ಓವರ್‌ಪಾಸ್‌ ಹಾಗೂ ವನ್ಯಜೀವಿ ಕಾರಿಡಾರ್‌ಗಳನ್ನು ನಿರ್ಮಿಸುವ ಷರತ್ತು ವಿಧಿಸಲಾಗಿತ್ತು. ಆದರೆ ರಸ್ತೆ ನಿರ್ಮಾಣದ ವೇಳೆ ಈ ಷರತ್ತುಗಳನ್ನು ಸಮರ್ಪಕವಾಗಿ ಪಾಲಿಸಲಾಗಿಲ್ಲ ಎಂಬ ವಿಚಾರವನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಹಾಗೂ ಅಪಾಯದ ಸ್ಥಿತಿಯಲ್ಲಿರುವ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸುವ ಕುರಿತು ಈಗಾಗಲೇ ಸ್ಪಷ್ಟ ಸೂಚನೆ ನೀಡಲಾಗಿದ್ದರೂ, ಅದರ ಪರಿಣಾಮಕಾರಿ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ಮಳೆ ಮತ್ತು ಗಾಳಿಯಿಂದ ಮರಗಳು ಹಾಗೂ ಕೊಂಬೆಗಳು ಬಿದ್ದು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಾಯಿ ಸಮಿತಿ ಸದಸ್ಯರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಅಪಾಯಕಾರಿಯಾಗಿರುವ ಮರಗಳು ಮತ್ತು ಕೊಂಬೆಗಳ ಗುರುತು ಪತ್ತೆ, ತೆರವು ಹಾಗೂ ತಡೆಗಟ್ಟುವ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ