ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದೆ.
ಪ್ರತಿಭಟನಾಕಾರರು ‘ಸಂಸದ್ ಚಲೋ’ ಕರೆಯನ್ನು ನೀಡಿ ಬ್ಯಾರಿಕೇಡ್ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗ ಮಾಡಿದ್ದಾರೆ.
ಟಾಲ್ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಕಲ್ಲು ತೂರಾಟ ನಡೆದಿದೆ. ಈ ಘರ್ಷಣೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 6 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಆಯೋಜಕರ ಮಾತು ಕೇಳದೆ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿ, ಲಾಠಿಗಳನ್ನು ಕಸಿದುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಜ್ಯಾಮರ್ಗಳನ್ನು ಅಳವಡಿಸಿ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ತೀವ್ರಗೊಂಡಿದ್ದು, ಸ್ಥಳದಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳ ಗುಂಪೊಂದು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ನಡೆಸಿದೆ. ಈ ಹಠಾತ್ ದಾಳಿಯಲ್ಲಿ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Laxmi News 24×7