ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆ.7ರಂದು ಮಧ್ಯಾಹ್ನ 3:45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್ಪ್ರೈಸರ್ಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಬೈಕ್‌ನಲ್ಲಿ ಬಂದ ಆರೋಪಿಗಳು ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಇಬ್ಬರನ್ನು ಈಗಾಗಲೇ ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳ ಬ್ಯಾಂಕ್ ಖಾತೆ ವಿವರ, ಮೊಬೈಲ್ ಹಾಗೂ ಕರೆ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಮೊಹಮ್ಮದ್ ಇರ್ಷಾದ್ ಹಾಗೂ ಚಿರಾಗ್ ಪೂಜಾರಿ ಎಂಬವರು ಆರೋಪಿಗಳಿಗೆ ಹಣ ಜಮೆ ಮಾಡಿ ಕೃತ್ಯಕ್ಕೆ ಸಹಕರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮುಂದುವರಿದ ತನಿಖೆಯಲ್ಲಿ ಆರೋಪಿಗಳ ಬ್ಯಾಂಕ್ ವಹಿವಾಟು, ಮೊಬೈಲ್ ಕರೆ ವಿವರಗಳು ಹಾಗೂ ಚಲನವಲನಗಳ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಕೊಲೆಗೆ ಅಪರಾಧಿಕ ಒಳಸಂಚು ರೂಪಿಸಿ ಕೃತ್ಯಕ್ಕೆ ಹಣಕಾಸಿನ ನೆರವು ನೀಡಿದ ಆರೋಪದಡಿ ಸದಾನಂದ ದೇವಾಡಿಗ ಅಲಿಯಾಸ್ ಸದಾನಂದ ಎ. (41) ಹಾಗೂ ಕಿಶೋರ್ ರಾಮ ಪೂಜಾರಿ (47)ಯನ್ನು ಬಂಧಿಸಲಾಗಿದೆ.
ಆದಮಾರು ಮಠದ ಬಳಿ ವಾಸವಾಗಿರುವ ಸದಾನಂದ ದೇವಾಡಿಗನಿಂದ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್, ಒಂದು ಬೈಕ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಉಚ್ಚಿಲ ಬಡಾ ಗ್ರಾಮದ ನಿವಾಸಿ ಕಿಶೋರ್ ರಾಮ ಪೂಜಾರಿಯಿಂದ ಮೂರು ಮೊಬೈಲ್ ಹಾಗೂ ಒಂದು ಕ್ರೇಟಾ ಕಾರು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪ್ರಕರಣದ ನೇರ ಆರೋಪಿ ರಾಜು, ಬೈಂದೂರು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
Laxmi News 24×7