Breaking News

ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ

Spread the love

ಮೈಸೂರು: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅರಣ್ಯ ಇಲಾಖೆ ) ತಿಳಿಸಿದೆ.

ಚಾಮರಾಜನಗರ  ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಬೇಟೆಗಾರರು ಏಕಾಏಕಿ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ.

ಮತ್ತೋರ್ವ ಬೇಟೆಗಾರ ಎಸ್ಕೇಪ್‌
ಮೃತರನ್ನು ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಕಾರ್ಯಾಚರಣೆಯಲ್ಲಿ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹ ವಶಪಡಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ಮಾಡಲಾಗಿದೆ.

ಎನ್‌ಕೌಂಟರ್‌ಗೆ ಸ್ಥಳೀಯರ ಆಕ್ರೋಶ
ಮೂವರು ಬೇಟೆಗಾರರ ಸಾವಿನ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಟೆಗಾರರನ್ನು ಮೊದಲು ಸೆರೆಹಿಡಿದು ಬಳಿಕ ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಅರಣ್ಯ ಇಲಾಖೆ ನಿರಾಕರಿಸಿದ್ದು, ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲೇ ಸಾವು ಸಂಭವಿಸಿದೆ ಎಂದು ಹೇಳಿದೆ.

ಶಾಗ್ಯ ಅರಣ್ಯ ಪ್ರದೇಶದಲ್ಲಿ ಉದ್ವಿಗ್ನ
ಆಕ್ರೋಶಗೊಂಡ ಸ್ಥಳೀಯರು ಶಾಗ್ಯದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಚೇರಿಯ ಪೀಠೋಪಕರಣಗಳಿಗೆ ಹಾನಿ ಮಾಡಿದ್ದು, ಬೈಕ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಘಟನೆಯಿಂದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ