ನವದೆಹಲಿ: ಕೃಷಿ ಸಚಿವ ನರೇಂದ್ರಸ್ವಾಮಿ ಅವರಿಂದು ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದರು. ಈ ವೇಳೆ ಸಲ್ಲಿಸಿದ ಮನವಿಗೆ ಕೇಂದ್ರ ಸಚಿವರು ಸ್ಪಂದಿಸಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯಕ್ಕೆ ಬಂದು ಯಾವುದಾದರೊಂದು ಬರಪೀಡಿತ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ನರೇಂದ್ರಸ್ವಾಮಿ ಅವರು ದೆಹಲಿಗೆ ತೆರಳಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬರದ ಹಿನ್ನೆಲೆ ಉಂಟಾಗಿರುವ ಕೃಷಿ ಸಮಸ್ಯೆಗಳು ಹಾಗೂ ಪ್ರಧಾನ ಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಆಗಸ್ಟ್ ಕೊನೆಯವರೆಗೆ ಅವಧಿ ವಿಸ್ತರಣೆ ಮಾಡುವ ಬಗ್ಗೆ ಸಮಾಲೋಚನೆ ನಡೆಸಿದರು.
ಪ್ರಧಾನ ಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದನ್ನು ನರೇಂದ್ರಸ್ವಾಮಿ ಅವರು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದರು. ಸಮಾಲೋಚನೆ ವೇಳೆ ಶಿವರಾಜ್ ಸಿಂಗ್ ಚೌಹಾಣ್ ಕರ್ನಾಟಕಕ್ಕೆ ಭೇಟಿ ಕೊಡುವುದು ಮಾತ್ರವಲ್ಲದೆ ಕರ್ನಾಟಕದಲ್ಲಿ ಮಳೆಯ ಅಭಾವದಿಂದಾಗಿ ಸೃಷ್ಟಿಯಾಗಿರುವ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೃಷಿ ವಿಮಾ ಅವಧಿ ಮುಕ್ತಾಯವಾಗುತ್ತಿರುವುದರಿಂದ ರೈತರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಈ ಹಿನ್ನೆಲೆ 666 ಕೃಷಿ ವಿಮಾ ಘಟಕಗಳಲ್ಲಿ ಮಧ್ಯಂತರ ಪರಿಹಾರ ಕೊಡಲು ಆದೇಶ ನೀಡಲಾಗಿದೆ. ಕೇಂದ್ರ ಪುರಸ್ಕೃತ ಎಲ್ಲಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿದೆ. ಜೊತೆಗೆ ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡಿಗೆ ನೀರು ಬಿಡುವುದರ ಜೊತೆಗೆ ರೈತರ ಬೆಳೆಗೆ ನೀರು ಬಿಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಕೃಷಿ ಚಟುವಟಿಕೆಗಳಿಗೆ ನೀರು ಬಿಡುವ ವಿಚಾರದಲ್ಲಿ ಯಾವುದನ್ನು ಮುಚ್ಚಿಡುವ ಅಗತ್ಯವಿಲ್ಲ. ಕೆಆರ್‌ಎಸ್ ಜಲಾಶಯದಲ್ಲಿ ಕೇವಲ 109 ಅಡಿ ನೀರಿದೆ. ಇದು ರಾಜ್ಯದ ರೈತರು ಒಂದು ಬೆಳೆ ಬೆಳೆಯುವುದಕ್ಕೆ ಸಾಲುವುದಿಲ್ಲ. ಇದರ ನಡುವೆ ಸುಪ್ರೀಂಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದು ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದೆ. ಈ ಸಮಸ್ಯೆಗೆ ಈಗ ಮಳೆಯೇ ಪರಿಹಾರ. ಕೃಷಿ ಚಟುವಟಿಕೆಗಳಿಗೆ ನೀರು ಬಿಡುವುದು ಕಷ್ಟಕರವಾದದ್ದಾಗಿದೆ. ಲಭ್ಯತೆ ಆಧಾರದ ಮೇಲೆ ನೀರು ಬಿಡುವ ಬಗ್ಗೆ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
Laxmi News 24×7