Breaking News

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ; ಸಿಎಂ ಸೇರಿ ಗಣ್ಯರಿಂದ ಸಂತಾಪ

Spread the love

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಶ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಗೇಶ್ ಅವರು ಅಜಾತಶತ್ರುವಾಗಿದ್ದರು. ಎಲ್ಲರನ್ನೂ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ

ಎಂಎಲ್‌ಸಿ ಸಿ.ಟಿ ರವಿ ಕೂಡ ಮಾತನಾಡಿ, ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿ. ರಾಜಕೀಯ ಮೀರಿ ಜನಪ್ರೀತಿ ಸಂಪಾದಿಸಿದ್ದರು. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ. ಶಾಸಕರಾಗುವ ಮುನ್ನವೇ ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದ ನಾಗೇಶ್, ಕೊನೆಯವರೆಗೂ ಪಕ್ಷ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನಾಗೇಶ್ ಅವರು ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್ ಎಂದು ಬಣ್ಣಿಸಿದ್ದಾರೆ.

ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ನಾಗೇಶ್ ಸಾಕಷ್ಟು ಶ್ರಮಿಸಿದ್ದರು. ನೀರಾವರಿ ಯೋಜನೆಗಳಿಗಾಗಿ ಹೆಚ್ಚಿನ ಕೆಲಸ ಮಾಡಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು. ಒಬ್ಬ ಗೆಳೆಯನನ್ನು ಕಳೆದುಕೊಂಡಿದ್ದೇವೆ. ಬಿಜೆಪಿಗೆ, ರಾಜ್ಯಕ್ಕೆ ಹಾಗೂ ವೈಯಕ್ತಿಕವಾಗಿ ಇದು ನೋವಿನ ಸಂಗತಿ ಎಂದು ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಬಿ.ಸಿ. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ. 67 ವರ್ಷದ ನಾಗೇಶ್ ಅವರು ಮಂಗಳವಾರ (ಆ.18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ಬಾರಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತರಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ರವಿಕುಮಾರ್ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ.


Spread the love

About Laxminews 24x7

Check Also

ಬಿ.ಸಿ.ನಾಗೇಶ್ ಅಗಲಿಕೆಗೆ ಸಚಿವ ಪ್ರಹ್ಲಾದ್ ಜೋಶಿ ಕಂಬನಿ

Spread the loveಬೆಂಗಳೂರು: ಸರಳ-ಸಜ್ಜನ, ಸ್ನೇಹಮಯಿ ಆಗಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ.ನಾಗೇಶ್ ಅವರ ನಿಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ