ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಹಾಗೂ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧ ಚಲೋ ಆರಂಭವಾಯಿತು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಿ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿತ್ತು. ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಪ್ರತಿಭಟನಾಕಾರರನ್ನು ಕರೆದೊಯ್ಯಲು ಬಿಎಂಟಿಸಿ ಬಸ್‌ಗಳನ್ನು ನಿಯೋಜಿಸಲಾಗಿತ್ತು.
ನಾಯಕರು ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಮಾರ್ಗಮಧ್ಯದಲ್ಲೇ ತಡೆದರು. ಇದರಿಂದಾಗಿ ರಸ್ತೆಯಲ್ಲೇ ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ಎನ್. ರವಿಕುಮಾರ್ ಸೇರಿದಂತೆ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು.
ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಿದ್ದ 187 ಕೋಟಿ ರೂ. ಹಣವನ್ನು ಲೂಟಿ ಮಾಡಿ ಬೇರೆಡೆ ಹಂಚಲಾಗಿದೆ. ನಾಗೇಂದ್ರ ನುಂಗಿದ್ದು ದಲಿತರ ಹಣವಲ್ಲವೇ? ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಉಳಿದವರ ಹೆಸರು ಬಹಿರಂಗವಾಗುತ್ತದೆ ಎಂಬ ಭಯದಿಂದ ಸಚಿವರನ್ನು ರಕ್ಷಿಸಲಾಗುತ್ತಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸದಿದ್ದರೆ ಬೀದಿ ಬೀದಿಯಲ್ಲಿ ಹೋರಾಟ ನಡೆಸುತ್ತೇವೆ” ಎಂದು ಸಿಟ್ಟು ಹೊರಹಾಕಿದರು.
ಡಾ. ಸಿ.ಎನ್. ಅಶ್ವಥ್ ನಾರಾಯಣ್ ಮಾತನಾಡಿ, ದಲಿತರ ಹಣ ನುಂಗಿ ನೀರು ಕುಡಿದವರಿಗೆ ತಕ್ಕ ಪಾಠ ಕಲಿಸುತ್ತೇವೆ. ಸಚಿವರ ರಾಜೀನಾಮೆ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲದು. ಸರ್ಕಾರದ ಗೂಂಡಾಗಿರಿ ನಡೆಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಮಾಜಿ ಸಚಿವ ರಾಜೂಗೌಡ ಮಾತನಾಡಿ, “ದಲಿತರ ಹಣ ಲೂಟಿ ಮಾಡುವುದೇ ಕಾಂಗ್ರೆಸ್ ಕೆಲಸವಾಗಿದೆ. ಹೈಕಮಾಂಡ್‌ನಿಂದಲೇ ಇವರಿಗೆ ಲೂಟಿಯ ಟಾಸ್ಕ್ ಸಿಕ್ಕಂತಿದೆ. ಸಂವಿಧಾನದ ಪ್ರತಿ ಹಿಡಿದು ಲೂಟಿ ಮಾಡುತ್ತಿದ್ದಾರೆ. ನೈತಿಕತೆ ಇದ್ದರೆ ಕೂಡಲೇ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಿರಿ” ಎಂದು ಆಗ್ರಹಿಸಿದರು.
Laxmi News 24×7