ಬೆಂಗಳೂರು: ಕರ್ನಾಟಕದಲ್ಲಿ 37 ವರ್ಷಗಳ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ವಿದ್ಯಾರ್ಥಿ ಚುನಾವಣೆಗೆ ಅಸ್ತು ಎಂದಿದೆ.
ಕಾಲೇಜು ಕ್ಯಾಂಪಸ್ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಆಗಿನ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.
ಪ್ರಸ್ತುತ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಷೇಧವನ್ನು ತೆರವುಗೊಳಿಸಿ ಚುನಾವಣೆ ನಡೆಸಲು ಮುಂದಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಸಲುವಾಗಿ ವಿದ್ಯಾರ್ಥಿ ಚುನಾವಣೆ ನಡೆಸಲು ಸರ್ಕಾರ ಅನುಮತಿ ಕೊಟ್ಟಿದೆ. ಚುನಾವಣೆ ನಡೆಸುವ ಅಧಿಕಾರ ಕಾಲೇಜು ಆಡಳಿತ ಮಂಡಳಿಗೆ ಬಿಟ್ಟಿದೆ.
ವಿದ್ಯಾರ್ಥಿ ಸಂಘದಲ್ಲಿ ಓರ್ವ ಅಧ್ಯಕ್ಷ, ಓರ್ವ ಮಹಿಳೆ ಸೇರಿದಂತೆ ಇಬ್ಬರು ಉಪಾಧ್ಯಕ್ಷರು ಇರಬೇಕಾಗುತ್ತದೆ. ಓರ್ವ ಕಾರ್ಯದರ್ಶಿ, ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಜಂಟಿ ಕಾರ್ಯದರ್ಶಿಯನ್ನು ಆಯ್ಕೆ ಮಾಡಬೇಕಾಗುತ್ತದೆ.
ಈ ಚುನಾವಣೆಯಲ್ಲಿ ಇಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ. ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ಚುನಾವಣೆ ಬೇಡ ಎಂದರೆ ಅಲ್ಲಿ ಚುನಾವಣೆ ನಡೆಯುವುದಿಲ್ಲ. ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳಿಗೆ ಅವಕಾಶ ಇರುವುದಿಲ್ಲ.
ಈ ಜೂನ್ನಲ್ಲಿ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿ ಮಾತಾಡಿದ್ದ ಡಿಕೆ ಶಿವಕುಮಾರ್ ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಪ್ರಕಟಿಸಿದ್ದರು.
Laxmi News 24×7