ಹುಬ್ಬಳ್ಳಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಹುಬ್ಬಳ್ಳಿಗೆ ಆಗಮಿಸಿದ್ದು, ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ರೈತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿ ಮಾಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಜೊತೆಗೆ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸಬೇಕು ಹಾಗೂ ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.
ರೈತ ಹೋರಾಟಗಾರ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಿಂದ ರೈತರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಜೋಶಿ ಕಚೇರಿ, ಮನೆ ಮುತ್ತಿಗೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಘೋಷಿಸಿದ್ದರು. ಆದರೆ, ಪೊಲೀಸ್ ಇಲಾಖೆಯಿಂದ ಅನುಮತಿ ಸಿಗದ ಹಿನ್ನೆಲೆಯಲ್ಲಿ ನೆಹರು ಮೈದಾನದಲ್ಲಿ ಹೋರಾಟ ನಡೆಸಲು ಯೋಜನೆ ರೂಪಿಸಲಾಗಿತ್ತು.
ಚೆನ್ನಮ್ಮ ವೃತ್ತದಿಂದ ಪ್ರಹ್ಲಾದ್ ಜೋಶಿ ಅವರ ನಿವಾಸದತ್ತ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೊನೆಗೆ ರೈತರು ಜೋಶಿ ಅವರ ನಿವಾಸದ ಬಳಿ ತಲುಪಿ ಪ್ರತಿಭಟನೆ ನಡೆಸಿದ್ದಾರೆ. ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ಮುಂದೆ ಸಾಗಲು ರೈತರು ಯತ್ನಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸಕ್ಕರೆ MSP 60ರೂ. ಹೆಚ್ಚಿಸಿ
ಇಂಚಿಗೇರಿ ಮಠದ ಶಶಿಕಾಂತ ಗುರೂಜಿ ಸೇರಿದಂತೆ ರೈತ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಕ್ಕರೆಯ MSP ದರವನ್ನು 31 ರೂ.ಗೆ ನಿಗದಿ ಮಾಡಲಾಗಿದ್ದು, ಇದನ್ನು 60 ರೂ.ಗೆ ಹೆಚ್ಚಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಕಬ್ಬಿನ ಬೆಲೆ ನಿಗದಿಯಲ್ಲಿ ರೈತರಿಗೆ ನ್ಯಾಯ ಸಿಗಬೇಕು ಮತ್ತು ಹೊಸ ಎಫ್ಆರ್ಪಿ ನಿಗದಿ ಮಾಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.
ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುದ್ದಾಗಿ ಬಂದು ರೈತರ ಮನವಿ ಸ್ವೀಕರಿಸಬೇಕು ಎಂದು ಶಶಿಕಾಂತ ಗುರೂಜಿ ಆಗ್ರಹಿಸಿದ್ದಾರೆ. ನೀವು ಕೇಂದ್ರ ಸಚಿವರು, ನಮಗೆ ಗೌರವ ಕೊಡಿ ಎಂದು ರೈತರ ಪರವಾಗಿ ಅವರು ಮನವಿ ಮಾಡಿದ್ದಾರೆ.
ಕಿ.ಮೀ.ಗಟ್ಟಲೇ ಜ್ಯಾಮ್
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ಪ್ರಮುಖ ರಸ್ತೆಗಳಲ್ಲೂ ಸಂಚಾರಕ್ಕೆ ಅಡ್ಡಿಯಾಗಿದೆ. ರೈತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಕೆಲವೆಡೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರಿಂದ ವಾಹನಗಳು ಕಿಲೋಮೀಟರ್ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಇದರಿಂದ ಹುಬ್ಬಳ್ಳಿ ನಗರದ ವಾಹನ ಸವಾರರು ಪರದಾಡುವಂತಾಯಿತು.
Laxmi News 24×7