Breaking News

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ; 18 ಮಂದಿ ಸಾವು, 300ಕ್ಕೂ ಹೆಚ್ಚು ಮನೆಗಳು ನೆಲಸಮ

Spread the love

ಬೀಜಿಂಗ್: ಚೀನಾದ ಟಿಬೆಟ್ ಪ್ರದೇಶದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ  ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 46 ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಮನೆಗಳಿಗೆ ವ್ಯಾಪಕ ಹಾನಿಯಾಗಿದೆ. ಜನರು ಅಂಗಡಿ, ರೆಸ್ಟೋರೆಂಟ್‌ಗಳಿಂದ ಹೊರಗೆ ಓಡಿಬಂದಿದ್ದಾರೆ. ಸದ್ಯ ಭೂಕಂಪ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.

ಟಿಬೆಟ್‌ನ ಪರ್ವತ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಪ್ರಾದೇಶಿಕ ರಾಜಧಾನಿ ಲಾಸಾದಿಂದ ಈಶಾನ್ಯಕ್ಕೆ ಸುಮಾರು 390 ಕಿಲೋಮೀಟರ್ ದೂರದಲ್ಲಿತ್ತು. ಭೂಮಿಯ ಸುಮಾರು 10 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.

ಬಕೆನ್ ಕೌಂಟಿಯ ಮಾರು ಪಟ್ಟಣದಲ್ಲೂ ಭೂಕಂಪದ ತೀವ್ರತೆ ಕಂಡುಬಂದಿದೆ. ಪಟ್ಟಣದ ಕಚೇರಿಯ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ವಿದ್ಯುತ್ ಮತ್ತು ದೂರಸಂಪರ್ಕ ಸೇವೆಗಳಲ್ಲೂ ವ್ಯತ್ಯಯ ಉಂಟಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ತುರ್ತು ಪ್ರತಿಕ್ರಿಯಾ ಕ್ರಮಗಳನ್ನು ಕೈಗೊಂಡಿದ್ದಾರೆ.

339 ಮನೆಗಳಿಗೆ ಹಾನಿ
ಸ್ಥಳೀಯ ಅಧಿಕಾರಿಗಳ ಮಾಹಿತಿ ಪ್ರಕಾರ, ಒಟ್ಟು 339 ಮನೆಗಳು ಕುಸಿದಿವೆ ಅಥವಾ ಹಾನಿಗೊಳಗಾಗಿವೆ. ಹಾನಿಗೊಳಗಾದ ಕಟ್ಟಡಗಳಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ.

ಪರಿಹಾರ ಕಾರ್ಯಗಳಿಗೆ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಾದೇಶಿಕ ಅಗ್ನಿಶಾಮಕ ಮತ್ತು ರಕ್ಷಣಾ ಪಡೆಗಳ 347 ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಭೂಕಂಪದಿಂದ ಮನೆ ಕಳೆದುಕೊಂಡಿರುವ ಜನರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಲು ಡೇರೆಗಳನ್ನು ಸ್ಥಾಪಿಸಲಾಗುತ್ತಿದೆ. ರಕ್ಷಣಾ ಕಾರ್ಯಕರ್ತರು ಹಾನಿಗೊಳಗಾದ ಕಟ್ಟಡಗಳನ್ನು ಪರಿಶೀಲಿಸುತ್ತಿದ್ದು, ಗಾಯಾಳುಗಳನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುತ್ತಿದ್ದಾರೆ.

ಐದು ವರ್ಷಗಳಲ್ಲೇ ಪ್ರಬಲ ಭೂಕಂಪ
ಕಳೆದ ಐದು ವರ್ಷಗಳಲ್ಲಿ ಟಿಬೆಟ್ ಪ್ರದೇಶದಲ್ಲಿ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪ ಇದಾಗಿದೆ ಎಂದು ವರದಿಯಾಗಿದೆ. ಭೂಕಂಪದಿಂದ ಉಂಟಾಗಿರುವ ಒಟ್ಟು ಹಾನಿಯ ಪ್ರಮಾಣವನ್ನು ಅಧಿಕಾರಿಗಳು ಇನ್ನೂ ಅಂದಾಜಿಸುತ್ತಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿವೆ.


Spread the love

About Laxminews 24x7

Check Also

ಆರ್‌ಎಸ್‌ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ತಂದೆಯಿಂದ ತಿಳಿದುಕೊಳ್ಳಲಿ: ಛಲವಾದಿ ತಿರುಗೇಟು

Spread the loveಬೆಂಗಳೂರು: ಆರ್‌ಎಸ್‌ಎಸ್ (RSS) ಬಗ್ಗೆ ಪ್ರಿಯಾಂಕ್ ಖರ್ಗೆ  ಅವರು ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತಿಳಿದುಕೊಳ್ಳಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ