Breaking News

ಚೆನ್ನಮ್ಮನ ಆದರ್ಶದಂತೆ ಮಕ್ಕಳನ್ನು ಬೆಳೆಸಿ: ಸಚಿವ ಸತೀಶ್ ಜಾರಕಿಹೊಳಿ ಕರೆ

Spread the love

ಬೆಳಗಾವಿ: ರಾಣಿ ಕಿತ್ತೂರು ಚೆನ್ನಮ್ಮನ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ರಾಣಿ ಚೆನ್ನಮ್ಮನ ಆದರ್ಶಗಳಂತೆ ಬೆಳೆಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು.

ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಶುಕ್ರವಾರ (ಅ. 23) ನಡೆದ 202ನೇ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಣಿ ಚೆನ್ನಮ್ಮನ ಹೋರಾಟ ಮತ್ತು ನಾಯಕತ್ವ ಇಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದು, ಅವರಿಗೆ ಸೂಕ್ತ ಅವಕಾಶ ದೊರೆತರೆ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂಬುದಕ್ಕೆ ಚೆನ್ನಮ್ಮನ ಜೀವನವೇ ಉದಾಹರಣೆಯಾಗಿದೆ ಎಂದರು.

ಕಾಕತಿಯಲ್ಲಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು. ಎಂಟು ಕೊಠಡಿಗಳ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು. ಕಿತ್ತೂರು ಉತ್ಸವವು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಣಿ ಚೆನ್ನಮ್ಮನ ಸಾಹಸಗಾಥೆ ದೇಶದ ಜನರಿಗೆ ಸದಾ ಪ್ರೇರಣೆಯಾಗಿದ್ದು, ಐತಿಹಾಸಿಕ ಸ್ಥಳಗಳನ್ನು ಕಿತ್ತೂರಿನ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು. ಕಾಕತಿಯ ಶಿವಪೂಜಿಮಠದ ರಾಚಯ್ಯ ಸ್ವಾಮೀಜಿ ಹಾಗೂ ಸಾಹಿತಿ ರಜನಿ ಜಿರಗ್ಯಾಳ ಅವರು ರಾಣಿ ಚೆನ್ನಮ್ಮನ ಹೋರಾಟ, ತ್ಯಾಗ ಮತ್ತು ಸ್ವಾಭಿಮಾನದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಹಾಗೂ ಬೈಲಹೊಂಗಲದಿಂದ ವೀರಜ್ಯೋತಿ ತಂದ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ಕಾಕತಿ ಮುಖ್ಯ ಬಸ್ ನಿಲ್ದಾಣದ ಬಳಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೈಲಹೊಂಗಲದಿಂದ ಆಗಮಿಸಿದ ವೀರಜ್ಯೋತಿಯನ್ನು ಬರಮಾಡಿಕೊಂಡು ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ರಾಣಿ ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಗಳೊಂದಿಗೆ ವಿವಿಧ ಜಾನಪದ ಕಲಾತಂಡಗಳು, ಕುಂಭಮೇಳ ಹಾಗೂ ವಾದ್ಯಮೇಳಗಳ ಭವ್ಯ ಮೆರವಣಿಗೆ ನಡೆಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಪಥಸಂಚಲನ ಉತ್ಸವದ ಸಂಭ್ರಮ ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆಸಿಫ್ ರಾಜು ಸೇಠ್, ಜಿಲ್ಲಾ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದೆಹಲಿ ಹೈಕೋರ್ಟ್‌ನಲ್ಲಿ ನೆಹಾ ಬೋರಾಗೆ ಹಿನ್ನಡೆ – 10,000 ರೂ. ಬಾಂಡ್‌ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ಸೂಚನೆ

Spread the loveನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಹೋರಾಟಗಾರ್ತಿ ನೆಹಾ ಬೋರಾ ಅವರಿಗೆ ದೆಹಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ