ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಬಿಂಡಿಗ- ಮಲ್ಲೇನಹಳ್ಳಿ ಗ್ರಾಮದ ಶಕ್ತಿದೇವತೆ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಈ ಬಾರಿ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಹೊಸ ನಿಯಮಗಳನ್ನ ಜಾರಿಗೆ ತಂದಿದೆ.
ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಎತ್ತರದ ಕಿರಿದಾದ ದುರ್ಗಮ ಹಾದಿಯ ಬೆಟ್ಟದ ತುದಿಯಲ್ಲಿರೋ ಜಗನ್ಮಾತೆ ದೇವಿರಮ್ಮ ಲಕ್ಷಾಂತರ ಭಕ್ತರಿಗೆ ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುತ್ತಾಳೆ.
ಈ ಬೆಟ್ಟದ ತಾಯಿಯ ದರ್ಶನ ಪಡೆಯಲು ಈ ಬಾರಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಹೊಸ ನಿಯಮಗಳನ್ನ ಜಾರಿಗೆ ತಂದಿದೆ. ಪ್ರತಿ ವರ್ಷ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ಹಿನ್ನೆಲೆ, ಈ ಬಾರಿ ಭಕ್ತರಿಗೆ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ.
ನವೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ಹಾಗೂ ನವೆಂಬರ್ 8ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ಮಾತ್ರ ಬೆಟ್ಟ ಹತ್ತಲು ಅನುಮತಿ ನೀಡಲಾಗಿದೆ. ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳಲಾಗಿದ್ದು, 15 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ ನೀಡಲಾಗಿದೆ. ಜೊತೆಗೆ ರಾತ್ರಿ ವೇಳೆ ಬೆಟ್ಟ ಹತ್ತುವುದನ್ನ ಈ ಬಾರಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಜಾತ್ರೆಗೆ ಈ ಬಾರಿಯೂ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸ್ವತಃ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಹಾಗೂ ದೇವಾಲಯ ಆಡಳಿತ ಮಂಡಳಿಯ ಅಧಿಕಾರಿಗಳು ಖುದ್ದಾಗಿ ಬೆಟ್ಟ ಏರಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.
ಭಕ್ತರ ಅನುಕೂಲಕ್ಕಾಗಿ ಮತ್ತು ಭದ್ರತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಸಾವಿರಾರು ಪೊಲೀಸರು, ಗೃಹ ರಕ್ಷಕ ದಳ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲು ಜಿಲ್ಲಾಡಳಿತ ಆದೇಶಿಸಿದೆ. ಬೆಟ್ಟ ಹತ್ತುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿದೆ.
Laxmi News 24×7