ಬೆಂಗಳೂರು,ಜು.28-ಮಾಸಿಕ ಗೌರವ ಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತರು ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಕಳೆದ 19 ದಿನಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.
ಮಾಸಿಕ ಗೌರವಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಾಗ್ರಿಗಳನ್ನು ನೀಡುವುದು, ಕೊರೊನಾ ಸೋಂಕಿಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ ಹಾಗೂ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂಬುದು ಒತ್ತಾಯವಾಗಿದೆ.
ಕಳೆದ ಜುಲೈ 10ರಿಂದ ಆಶಾಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂದಿನಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ.
ಜನವರಿ ತಿಂಗಳಿನಲ್ಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ನಮ್ಮ ಅಹವಾಲನ್ನು ಸ್ವೀಕರಿಸಲಾಯಿತೇ ಹೊರತು ಈವರೆಗೂ ಒಂದೇ ಒಂದೂ ಬೇಡಿಕೆಯನ್ನೂ ಈಡೇರಿಸಿಲ್ಲ ಎಂಬುದು ಆಶಾ ಕಾರ್ಯಕರ್ತೆಯರ ನೋವಾಗಿದೆ.
ಹೀಗಾಗಿ ಸರ್ಕಾರದ ಗಮನ ಸೆಳೆಯುವ ಸದುದ್ದೇಶದಿಂದ ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ