Breaking News

ರಸ್ತೆ ಅಗಲೀಕರಣದ ಹೆಸರಲ್ಲಿ ಮರಗಳ ಮಾರಣಹೋಮಕ್ಕೆ ವಿರೋಧ!

Spread the love

ಮಡಿಕೇರಿ: ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಹಸಿರು ಮರಗಳಿಗೆ ಕೊಡಲಿ ಪೆಟ್ಟು ಬೀಳುವ ಆತಂಕ ಎದುರಾಗಿದೆ. ಮಡಿಕೇರಿಯ (Madikeri) ರಾಜಾಸೀಟ್ ರಸ್ತೆಯ ಬದಿಯಲ್ಲಿರುವ ಸುಮಾರು 12 ಮರಗಳನ್ನು ತೆರವುಗೊಳಿಸಲು ನಗರಸಭೆ ಮುಂದಾಗಿದೆ ಎನ್ನಲಾಗಿದ್ದು, ಈ ನಿರ್ಧಾರ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ ಅಗಲೀಕರಣದ ನೆಪದಲ್ಲಿ ವರ್ಷಗಳಿಂದ ನೆರಳು ನೀಡುತ್ತಿರುವ ಮರಗಳನ್ನು ಕಡಿಯುವ ಬದಲು, ಅವುಗಳಿಗೆ ಯಾವುದೇ ಹಾನಿಯಾಗದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂಬುದು ಪರಿಸರ ಪ್ರೇಮಿಗಳ ಒತ್ತಾಯವಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಾರ್ವಜನಿಕರು ಮುಂದಾಗಿದ್ದಾರೆ. ಅಷ್ಟಕ್ಕೂ ಮರಗಳ ತೆರವಿಗೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ಈ ಕುರಿತ ವರದಿ ಇಲ್ಲಿದೆ.

ಮಂಜಿನ ನಗರಿ ಮಡಿಕೇರಿ… ಹಚ್ಚಹಸಿರಿನ ಪ್ರಕೃತಿ ಸೌಂದರ್ಯವೇ ಈ ಪ್ರವಾಸಿ ತಾಣದ ಪ್ರಮುಖ ಆಕರ್ಷಣೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ತಂಪಾದ ವಾತಾವರಣದ ಜೊತೆಗೆ ರಸ್ತೆಯ ಇಕ್ಕೆಲಗಳಲ್ಲಿರುವ ಹಳೆಯ ಮರಗಳು ನೆರಳಿನ ಆಸರೆಯಾಗಿವೆ. ಆದರೆ, ಇದೀಗ ಅಭಿವೃದ್ಧಿಯ ಹೆಸರಿನಲ್ಲಿ ಇದೇ ಮರಗಳ ಅಸ್ತಿತ್ವಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ.

ರಾಜಾಸೀಟ್ ರಸ್ತೆಯ ಬದಿಯಲ್ಲಿರುವ ಸುಮಾರು 12 ಮರಗಳನ್ನು ತೆರವುಗೊಳಿಸಲು ನಗರಸಭೆ ಮುಂದಾಗಿದೆ ಎನ್ನಲಾಗಿದ್ದು, ಈ ನಿರ್ಧಾರಕ್ಕೆ ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬೆಳೆದು ನಿಂತಿರುವ ಈ ಮರಗಳು ಕೇವಲ ನೆರಳು ನೀಡುವುದಷ್ಟೇ ಅಲ್ಲದೆ, ಪರಿಸರ ಸಮತೋಲನ ಕಾಪಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿವೆ. ಬಿಸಿಲಿನ ತಾಪದಿಂದ ಸಾರ್ವಜನಿಕರಿಗೆ ರಕ್ಷಣೆ ನೀಡುವ ಈ ಮರಗಳು ಮಡಿಕೇರಿಯ ಪ್ರಕೃತಿ ಸೌಂದರ್ಯದ ಅವಿಭಾಜ್ಯ ಅಂಗವಾಗಿವೆ.

ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳು ಅಗತ್ಯವೇ ಇಲ್ಲವೆಂದಲ್ಲ. ಆದರೆ, ಅಭಿವೃದ್ಧಿಯ ಹೆಸರಿನಲ್ಲಿ ಹಸಿರು ಮರಗಳನ್ನು ಕಡಿದು ಹಾಕುವುದೇ ಪರಿಹಾರವಾಗಬಾರದು. ಮರಗಳಿಗೆ ಹಾನಿಯಾಗದಂತೆ ಪರ್ಯಾಯ ಯೋಜನೆ ರೂಪಿಸಿ ಕಾಮಗಾರಿ ಕೈಗೊಳ್ಳಬೇಕು. ಪ್ರಕೃತಿಯನ್ನು ಉಳಿಸಿಕೊಂಡೇ ಅಭಿವೃದ್ಧಿ ಸಾಧಿಸಬೇಕು ಎಂಬುದು ಪರಿಸರ ಪ್ರೇಮಿಗಳ ಆಗ್ರಹವಾಗಿದೆ.

ಇನ್ನು ಕೊಡಗು ಜಿಲ್ಲೆಗೆ ಪ್ರವಾಸಿಗರು ಆಗಮಿಸುವುದೇ ಇಲ್ಲಿನ ಹಸಿರು ವಾತಾವರಣ, ತಂಪಾದ ಗಾಳಿ ಹಾಗೂ ಪ್ರಕೃತಿ ಸೌಂದರ್ಯವನ್ನು ಸವಿಯಲು. ಇಂತಹ ಸಂದರ್ಭದಲ್ಲಿ ರಸ್ತೆ ಬದಿಯ ಮರಗಳನ್ನೇ ಕಡಿದು ಹಾಕಿದರೆ ಜಿಲ್ಲೆಯ ಪರಿಸರ ಸೌಂದರ್ಯಕ್ಕೆ ಧಕ್ಕೆಯಾಗಲಿದೆ ಎಂಬ ಆತಂಕ ಸಾರ್ವಜನಿಕರಲ್ಲಿದೆ. ಈ ಹಿನ್ನೆಲೆಯಲ್ಲಿ ಮರಗಳ ತೆರವುಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಮುಂದಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಮರುಬಳಕೆಗೆ ಸರ್ಕಾರ ನಿರ್ಬಂಧ – ಶೀಘ್ರದಲ್ಲೇ ಹೊಸ ಆ್ಯಪ್ ಬಿಡುಗಡೆ

Spread the loveಬೆಂಗಳೂರು: ಅಡುಗೆ ಎಣ್ಣೆ  ಮರುಬಳಕೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ದಿಟ್ಟ ಹೆಜ್ಜೆ ಇಟ್ಟಿದೆ. ಹೋಟೆಲ್‌ಗಳಲ್ಲಿ ಇನ್ಮುಂದೆ ಅಡುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ