Breaking News

ಬೆಳಗಾವಿಯಲ್ಲಿ ಮೂರು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ: ಸಚಿವ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನಾ ಮನೋಭಾವ ಬೆಳೆಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ 6ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಸಮ್ಮೇಳನವನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಜ್ಞಾನ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಸಿ.ಪಿ.ಎಡ್. ಮೈದಾನದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲ ಶಾಲಾ ಮಕ್ಕಳೂ ಭಾಗವಹಿಸಿ ವಿಜ್ಞಾನದ ಹೊಸ ಆವಿಷ್ಕಾರಗಳು, ಸಂಶೋಧನೆಗಳು ಹಾಗೂ ವೈಜ್ಞಾನಿಕ ಕೌತುಕಗಳನ್ನು ತಿಳಿದುಕೊಳ್ಳಲು ಅವಕಾಶ ಕಲ್ಪಿಸಬೇಕು. ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಗಳ ಮೂಲಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ಖಾಸಗಿ ಶಾಲೆಗಳು ತಮ್ಮ ಶಾಲಾ ವಾಹನಗಳ ಮೂಲಕ ವಿದ್ಯಾರ್ಥಿಗಳನ್ನು ಕರೆತರಬೇಕು. ಬೆಳಗಾವಿ ನಗರ ವ್ಯಾಪ್ತಿಯಲ್ಲಿರುವ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮ್ಮೇಳನದಲ್ಲಿ ಭಾಗವಹಿಸುವಂತೆ ಸಂಬಂಧಪಟ್ಟ ಇಲಾಖೆಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಸಮ್ಮೇಳನ ನಡೆಯುವ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು, ಅಗತ್ಯ ಮೂಲಸೌಕರ್ಯ ಹಾಗೂ ಇತರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ಪೂರೈಕೆ ಮಾಡಬೇಕು. ಸರ್ಕಾರಿ ಮಳಿಗೆಗಳ ಜತೆಗೆ ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳ ಮಳಿಗೆಗಳನ್ನೂ ಸ್ಥಾಪಿಸಬೇಕು. ಸಮ್ಮೇಳನದ ಸಭಾಧ್ಯಕ್ಷರನ್ನು ಜಾನಪದ ಕಲಾ ತಂಡಗಳ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ನ.30ರೊಳಗೆ ಸಿದ್ಧತಾ ರೂಪುರೇಷೆ ಪೂರ್ಣ

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಸಮ್ಮೇಳನದ ಯಶಸ್ವಿ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ನ.30ರೊಳಗೆ ಸಮ್ಮೇಳನದ ಸಂಪೂರ್ಣ ಸಿದ್ಧತಾ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರ ಪಟ್ಟಿಯನ್ನು ಮುಂಚಿತವಾಗಿ ನೀಡಿದರೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಸಮ್ಮೇಳನದ ಸ್ಥಳದಲ್ಲಿ ತುರ್ತು ವೈದ್ಯಕೀಯ ತಂಡ ಹಾಗೂ ಅಗ್ನಿಶಾಮಕ ದಳವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗುವುದು. ಯಾವುದೇ ಅಡಚಣೆಯಾಗದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಆರನೇ ಸಮ್ಮೇಳನ ಬೆಳಗಾವಿಯಲ್ಲಿ

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ವೈಚಾರಿಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ಆಯೋಜಿಸಲಾಗುತ್ತಿದೆ. 2021ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಇದೀಗ ಆರನೇ ಸಮ್ಮೇಳನಕ್ಕೆ ಬೆಳಗಾವಿ ಆತಿಥ್ಯ ವಹಿಸುತ್ತಿದೆ ಎಂದು ತಿಳಿಸಿದರು.

ಮೂರು ದಿನಗಳ ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆ. ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಅವರು ಸಮ್ಮೇಳನದ ಸಭಾಧ್ಯಕ್ಷರಾಗಿ ಆಗಮಿಸಲಿದ್ದಾರೆ. ಮಕ್ಕಳಿಗೆ ವಿಜ್ಞಾನ ಕ್ಷೇತ್ರದ ಸಾಧನೆಗಳು ಹಾಗೂ ಹೊಸ ಆವಿಷ್ಕಾರಗಳನ್ನು ಪರಿಚಯಿಸಲು ವಿವಿಧ ವಿಜ್ಞಾನ ಮಳಿಗೆಗಳು ಮತ್ತು ಸಂಚಾರಿ ತಾರಾಲಯಗಳನ್ನು ಸ್ಥಾಪಿಸಲಾಗುವುದು. ಡಿ.27ರಂದು ಸಭಾಧ್ಯಕ್ಷರನ್ನು ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಆಸೀಫ್ (ರಾಜು) ಸೇಠ್, ಪೊಲೀಸ್ ಆಯುಕ್ತ ನಿಕಮ್ ಪ್ರಕಾಶ್ ಅಮ್ರಿತ್, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದಕ್ಷಿಣ ಆಫ್ರಿಕಾದಲ್ಲಿ ಎರಡು ಪ್ರತ್ಯೇಕ ಗುಂಡಿನ ದಾಳಿ – 17 ಮಂದಿ ಬಲಿ

Spread the loveಕೇಪ್ ಟೌನ್: ದಕ್ಷಿಣ ಆಫ್ರಿಕಾದಲ್ಲಿ  ನಡೆದ ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ 17 ಮಂದಿ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ