ಬೆಳಗಾವಿ: ನಗರದ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ, ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರ ಪೊಲೀಸ್ ಇಲಾಖೆಯಿಂದ ಆತ್ಮಹತ್ಯೆ ನಿಗ್ರಹ ದಳ ರಚಿಸಲಾಗಿದೆ.
ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ವಿವಿಧ ರೈತಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಪ್ರತಿಭಟನಾಕಾರರು ಆತ್ಮಹತ್ಯೆಗೆ ಯತ್ನಿಸುವಂತಹ ಘಟನೆಗಳನ್ನು ತಡೆಯಲು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ನಿಯೋಜಿಸಲಾಗಿದೆ.
ಈ ದಳದ ಕಾರ್ಯನಿರ್ವಹಣೆ ಕುರಿತು ನವೆಂಬರ್ 18ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಿಸಿಪಿ (ಕಾ&ಸು) ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಮ್ಸ್ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು ಪೊಲೀಸ್ ಸಿಬ್ಬಂದಿಗೆ ಆತ್ಮಹತ್ಯೆ ತಡೆಗಟ್ಟುವ ವಿಧಾನಗಳು ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತರಬೇತಿ ನೀಡಿದರು.
ಆತ್ಮಹತ್ಯೆ ನಿಗ್ರಹ ದಳದ ಉಸ್ತುವಾರಿ ಅಧಿಕಾರಿ, ಸಿಸಿಬಿ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ ನಾಯಿಕ ಸೇರಿದಂತೆ ತಂಡದ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಅಧಿವೇಶನದ ಅವಧಿಯಲ್ಲಿ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವುದರ ಜೊತೆಗೆ, ಸಂಭವನೀಯ ಆತ್ಮಹತ್ಯೆ ಯತ್ನಗಳನ್ನು ತಡೆಯಲು ಪೊಲೀಸ್ ಇಲಾಖೆ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ.
Laxmi News 24×7