ನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸಲಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಚಿಕಾಗೋ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದರು. ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳನ್ನು ಪ್ರಸ್ತಾಪಿಸಿದ ಅವರು, ಚುನಾವಣೆಯಿಂದ ಹಿಂದೆ ಸರಿಯುವುದು ಸಮಸ್ಯೆಗೆ ಪರಿಹಾರವಲ್ಲ. ವಿರೋಧ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸದೇ ಇದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ಹೋರಾಟಕ್ಕೆ ಹಿನ್ನಡೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಜನರ ಮುಂದಿಡುವುದು ಮತ್ತು ಈ ಕುರಿತು ಜಾಗೃತಿ ಮೂಡಿಸುವುದು ವಿರೋಧ ಪಕ್ಷಗಳ ಕಾರ್ಯತಂತ್ರವಾಗಿದೆ. ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಹಲವು ವಿಚಾರಗಳಿವೆ. ಮತದಾರರ ಪಟ್ಟಿಯಲ್ಲಿನ ಲೋಪಗಳು ಹಾಗೂ ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ ಆರೋಪಗಳನ್ನು ಜನರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಆಯೋಗದೊಳಗಿನಿಂದಲೂ ಕೆಲವು ಮಾಹಿತಿ ಹೊರಬರುತ್ತಿದೆ ಎಂದು ತಿಳಿಸಿದರು. ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕಾಪಾಡುವುದು ತಮ್ಮ ಹೋರಾಟದ ಉದ್ದೇಶವಾಗಿದೆ ಎಂದು ಹೇಳಿದರು.
ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಜನರು ಯಾವುದೇ ಭಯವಿಲ್ಲದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ವಾತಾವರಣ ನಿರ್ಮಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿರೋಧ ಪಕ್ಷಗಳು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯದೆ ಹೋರಾಟ ಮುಂದುವರಿಸಲಿವೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.
Laxmi News 24×7