Breaking News

ಬಸವಣ್ಣನವರ ಅವಹೇಳನ ಪ್ರಕರಣ: ರವಿ ಹಂಜಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಹೋರಾಟ

Spread the love

ಬೆಳಗಾವಿ: ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಹಾಗೂ ‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಅಂಶಗಳನ್ನು ಪ್ರಕಟಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಹಾಗೂ ಅಥಣಿ ಮೋಟಗಿ ಮಠದ ಪ್ರಭುಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ಲೇಖಕ ರವಿ ಹಂಜಿ ಹಾಗೂ ಖಾಸಗಿ ಪತ್ರಿಕೆಯ ಸಂಪಾದಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅಲ್ಲಮಪ್ರಭು ಸ್ವಾಮೀಜಿ, ಬಸವಣ್ಣನವರ ವ್ಯಕ್ತಿತ್ವ ಹಾಗೂ ತತ್ವಾದರ್ಶಗಳಿಗೆ ಧಕ್ಕೆ ತರುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಬಸವಣ್ಣನವರ ವಿಚಾರಧಾರೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಗೌರವಿಸುತ್ತಿದ್ದು, ಇಂತಹ ಮಹಾನ್ ದಾರ್ಶನಿಕರ ಕುರಿತು ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿರುವುದು ಖಂಡನೀಯ. ವಿವಾದಿತ ಪುಸ್ತಕವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿರುವುದು ಸ್ವಾಗತಾರ್ಹ. ಪುಸ್ತಕದ ಮಾರಾಟ ಮತ್ತು ಪ್ರಸಾರ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನು ಪ್ರಭುಚನ್ನಬಸವ ಸ್ವಾಮೀಜಿ ಮಾತನಾಡಿ, ಮಹಾನ್ ದಾರ್ಶನಿಕರನ್ನು ನಿಂದಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಗಂಭೀರ ಅಪರಾಧ ಎಸಗಲಾಗಿದೆ. ಲೇಖಕ ರವಿ ಹಂಜಿ ವಿದೇಶದ ಯಾವುದೇ ಮೂಲೆಯಲ್ಲಿದ್ದರೂ ಬಂಧಿಸಿ ರಾಜ್ಯಕ್ಕೆ ಕರೆತರಬೇಕು. ಆರೋಪಿಯನ್ನು ಬಿಡುಗಡೆ ಮಾಡಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದರ ಜತೆಗೆ ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ಪ್ರಕರಣದಲ್ಲಿ ಕೇವಲ ಎಫ್‌ಐಆರ್ ದಾಖಲಿಸುವುದರಿಂದ ಪ್ರಯೋಜನವಿಲ್ಲ. ಇದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಇರುವ ಅನುಮಾನವಿದ್ದು, ಲೇಖಕ ಹಾಗೂ ಖಾಸಗಿ ಪತ್ರಿಕೆಯ ಸಂಪಾದಕರ ಪಾತ್ರ ಸೇರಿದಂತೆ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಸವಣ್ಣನವರ ಗೌರವ ಮತ್ತು ತತ್ವಾದರ್ಶಗಳಿಗೆ ಧಕ್ಕೆ ತರುವ ಕೃತ್ಯಗಳನ್ನು ಸಹಿಸುವುದಿಲ್ಲ. ಸರ್ಕಾರ ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ರಾಜ್ಯಾದ್ಯಂತ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಮಗನನ್ನೇ ಹತ್ಯೆಗೈದ ಮಲತಂದೆ, ರೂಮ್ ಲಾಕ್ ಮಾಡಿ ಎಸ್ಕೇಪ್: ಮೃತದೇಹದೊಂದಿಗೆ ಮೂರು ದಿನ ಕಳೆದ ತಾಯಿ

Spread the loveಮಗನನ್ನೇ ಹತ್ಯೆಗೈದ ಮಲತಂದೆ: ರೂಮ್ ಲಾಕ್ ಮಾಡಿ ಎಸ್ಕೇಪ್: ಮೃತದೇಹದೊಂದಿಗೆ ಮೂರು ದಿನ ಕಳೆದ ತಾಯಿ ಮಲತಂದೆಯೊಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ