ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಅನ್ನದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿವೆ. ಕುಡಿಯುವ ನೀರಿಗೂ ತತ್ವಾರ ಎದುರಾಗಿದ್ದು, ಬೇಸತ್ತ ವಿದ್ಯಾರ್ಥಿಗಳು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸುಮಾರು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕಾದ ಶಾಲೆಯಲ್ಲಿ ಕಳಪೆ ಆಹಾರ ಪೂರೈಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ನೀಡಿದ ಅನ್ನದಲ್ಲಿ ಹುಳುಗಳು ಪತ್ತೆಯಾಗಿದ್ದು, ಇದನ್ನು ಕಂಡ ಮಕ್ಕಳು ಆತಂಕಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲ, ಕಳೆದ ಎರಡು ದಿನಗಳಿಂದ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಹಾರದ ಗುಣಮಟ್ಟ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಥಳೀಯ ವಕೀಲರ ತಂಡ ಕೂಡ ಬೆಂಬಲ ನೀಡಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಶಾಲೆಯ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಶಾಲೆಯಲ್ಲಿರುವ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಹಾಗೂ ಶಾಲೆಯಲ್ಲಿನ ಅವ್ಯವಸ್ಥೆ ಹಿನ್ನೆಲೆಯಲ್ಲಿ ಪ್ರಾಂಶುಪಾಲ ರಾಮಣ್ಣ ಮತ್ತು ವಾರ್ಡನ್ ಮಹಾದೇವಿ ಕಾಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತು ಗುಣಮಟ್ಟದ ಆಹಾರ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Laxmi News 24×7