ಹುಬ್ಬಳ್ಳಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಅಪರಾಧಿಗೆ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 45,000 ರೂ. ದಂಡ ವಿಧಿಸಿದೆ.
ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ. ನ.22 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ಸೆಕ್ಷನ್ 451 ಹಾಗೂ ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದ ಸೆಕ್ಷನ್ 201ರ ಅಡಿಯಲ್ಲಿ ಗಿರೀಶ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು (ನ.25) ನ್ಯಾಯಾಧೀಶೆ ಪಲ್ಲವಿ ಬಿ.ಆರ್ ಅವರು ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.
ಏನಿದು ಪ್ರಕರಣ?
ಅಪರಾಧಿಯೂ 2024ರ ಮೇ 15 ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ (20) ಅವಳನ್ನು ಹತ್ಯೆ ಮಾಡಿ ಪರಾರಿಯಾಗಿದ್ದ.
ದಾವಣಗೆರೆಯಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ. ಇದಕ್ಕೂ ಕೆಲವೇ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ನಡೆದಿದ್ದರಿಂದ ಅಂಜಲಿ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿಸಿತ್ತು. ತನಿಖೆ ನಡೆಸಿದ ಸಿಐಡಿ 494 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.
Laxmi News 24×7