Breaking News

ಪ್ರತಿಭಾನ್ವೇಷಣೆ ಪರೀಕ್ಷೆ: ಪರಿಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ಭೇಟಿ

Spread the love

ಬೆಳಗಾವಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಅವರನ್ನು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ ಜಿಲ್ಲಾಮಟ್ಟದ ಪ್ರತಿಭಾನ್ವೇಷಣೆ (ಟ್ಯಾಲೆಂಟ್ ಸರ್ಚ್) ಪರೀಕ್ಷೆ ಬುಧವಾರ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಈ ಬಾರಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ವಿಭಾಗಗಳಿಂದ ಒಟ್ಟು 1,584 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

ಬೆಳಗಾವಿ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳಿಗೆ ನಗರದ ಸೇಂಟ್ ಕ್ಸೇವಿಯರ್ ಹಾಗೂ ಸೇಂಟ್ ಮೇರಿಸ್ ಶಾಲೆಗಳಲ್ಲಿ ಪರೀಕ್ಷೆ ನಡೆಸಲಾಯಿತು. ಇಲ್ಲಿ 9ನೇ ತರಗತಿಯ 365 ಹಾಗೂ 10ನೇ ತರಗತಿಯ 374 ವಿದ್ಯಾರ್ಥಿಗಳು ಸೇರಿ ಒಟ್ಟು 739 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಅದೇ ರೀತಿ ಚಿಕ್ಕೋಡಿ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳಿಗೆ ನಗರದ ಸಿ.ಎಸ್.ಎಸ್. ಪ್ರೌಢಶಾಲೆ ಹಾಗೂ ಆರ್.ಡಿ. ಪ್ರೌಢಶಾಲೆಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. 9ನೇ ತರಗತಿಯ 421 ಹಾಗೂ 10ನೇ ತರಗತಿಯ 424 ವಿದ್ಯಾರ್ಥಿಗಳು ಸೇರಿ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡರು.

ಎರಡೂ ಶೈಕ್ಷಣಿಕ ವಿಭಾಗಗಳಿಂದ 9ನೇ ತರಗತಿಯ 786 ಹಾಗೂ 10ನೇ ತರಗತಿಯ 798 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,584 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ 100 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಅಭಿನಂದಿಸಲು ನಿರ್ಧರಿಸಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಸಿಇಒ ಭೇಟಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಗರದ ಸೇಂಟ್ ಕ್ಸೇವಿಯರ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಹಾಜರಾತಿ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಡಿಡಿಪಿಐ ಲೀಲಾವತಿ ಹಿರೇಮಠ ಹಾಗೂ ಮಣ್ಣಿಕೇರಿ ಡಯಟ್ ಪ್ರಾಂಶುಪಾಲ ಯು.ಡಿ. ಹುಣಕುಪ್ಪಿ ಉಪಸ್ಥಿತರಿದ್ದರು.

ಪ್ರತಿಭಾನ್ವೇಷಣೆ ಪರೀಕ್ಷೆಯು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ, ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಉತ್ತಮ ವೇದಿಕೆ ಕಲ್ಪಿಸುತ್ತದೆ. ಈ ಬಾರಿ ಜಿಲ್ಲಾಮಟ್ಟದ ಪರೀಕ್ಷೆಗೆ 1,584 ವಿದ್ಯಾರ್ಥಿಗಳು ಹಾಜರಾಗಿರುವುದು ಸಂತಸದ ಸಂಗತಿ ಎಂದು ರಾಹುಲ್ ಶಿಂಧೆ ತಿಳಿಸಿದರು.

ಗ್ರಾಮದಿಂದ ಜಿಲ್ಲಾ ಮಟ್ಟದವರೆಗೆ ಪರೀಕ್ಷೆ

ಜಿಲ್ಲಾ ಪಂಚಾಯತ್ ವತಿಯಿಂದ 2024-25ನೇ ಸಾಲಿನಿಂದ ಈ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳು ಹಾಗೂ ಸರ್ಕಾರಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಆಯೋಜಿಸಲಾಗುತ್ತಿದೆ.

ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ವಿಭಾಗಗಳ ಒಟ್ಟು 15 ಶೈಕ್ಷಣಿಕ ವಲಯಗಳ ಸರ್ಕಾರಿ ಪ್ರೌಢಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಮೊದಲ ಹಂತದ ಪರೀಕ್ಷೆ ನಡೆಸಲಾಗುತ್ತದೆ. ಪ್ರತಿ ಶಾಲೆಯಲ್ಲಿ ಮೊದಲ ಹತ್ತು ಸ್ಥಾನ ಪಡೆಯುವ ವಿದ್ಯಾರ್ಥಿಗಳನ್ನು ತಾಲೂಕು ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ. ನಂತರ ಪ್ರತಿ ಶೈಕ್ಷಣಿಕ ವಲಯದಿಂದ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಜಿಲ್ಲಾ ಮಟ್ಟದ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ 100 ವಿದ್ಯಾರ್ಥಿಗಳನ್ನು ಅಂತಿಮವಾಗಿ ಗುರುತಿಸಿ ಅಭಿನಂದಿಸಲಾಗುತ್ತದೆ.

ಕಳೆದ ವರ್ಷದ ಪ್ರತಿಭೆ ರಾಜ್ಯಕ್ಕೆ ಪ್ರಥಮ

ಈ ಪ್ರತಿಭಾನ್ವೇಷಣೆ ಪರೀಕ್ಷೆಯ ಮಹತ್ವಕ್ಕೆ ಸಾಕ್ಷಿಯಾಗಿ ಕಳೆದ ವರ್ಷ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದಾರ ಪಾಟೀಲ ಅವರು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಿದರೆ ಅವರು ರಾಜ್ಯಮಟ್ಟದಲ್ಲಿಯೂ ಸಾಧನೆ ಮಾಡಬಲ್ಲರು ಎಂಬುದಕ್ಕೆ ಈ ಸಾಧನೆ ಉತ್ತಮ ಉದಾಹರಣೆಯಾಗಿದೆ.


Spread the love

About Laxminews 24x7

Check Also

ತೋಟದಲ್ಲಿ AI ಚಿರತೆ ಸೃಷ್ಟಿಸಿ ಪುಂಡಾಟ – ಕಿಡಿಗೇಡಿಗಾಗಿ ಪೊಲೀಸರ ಹುಡುಕಾಟ

Spread the loveದಾವಣಗೆರೆ: ಕಿಡಿಗೇಡಿಯೊಬ್ಬ ತೋಟದಲ್ಲಿ ಚಿರತೆ ಓಡಾಡುವಂತೆ AI ಚಿತ್ರ ಸೃಷ್ಟಿಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಚನ್ನಗಿರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ