Breaking News

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆಗೆ ದ್ವನಿಗೂಡಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Spread the love

ಬೆಳಗಾವಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆಯಾಗಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಜಿಲ್ಲೆ ರಚನೆಗೆ ಮೊದಲ ಆದ್ಯತೆ ನೀಡಲಾಗುವುದು. ಮುಂಬರುವ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚಿಕ್ಕೋಡಿ ಜಿಲ್ಲೆ ರಚನೆ ಕುರಿತು ವಿಶೇಷ ಮನವಿ ಸಲ್ಲಿಸಲಾಗುವುದು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದರು.

ಚಿಕ್ಕೋಡಿ ನಗರದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ, ಸಾರ್ವಜನಿಕರ ಸಮಸ್ಯೆಗಳು ಹಾಗೂ ಹಲವು ಪ್ರಮುಖ ಬೇಡಿಕೆಗಳ ಕುರಿತು ಮಾಹಿತಿ ಹಂಚಿಕೊಂಡರು.

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾದರೆ ಈ ಭಾಗದ ಆಡಳಿತಾತ್ಮಕ ಕೆಲಸಗಳಿಗೆ ಅನುಕೂಲವಾಗುವುದರ ಜತೆಗೆ ಸಾರ್ವಜನಿಕರು ದೂರದ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದು ತಪ್ಪಲಿದೆ. ಜನರ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಜಿಲ್ಲೆ ರಚನೆಯ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಮಾಜಿ ಸೈನಿಕರ ಅನುಕೂಲಕ್ಕೆ ಮಿಲಿಟರಿ ಕ್ಯಾಂಟೀನ್

ಚಿಕ್ಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಜಿ ಸೈನಿಕರು ಮತ್ತು ಸೈನಿಕರ ಕುಟುಂಬಗಳಿದ್ದು, ಅವರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ದೂರದ ಪ್ರದೇಶಗಳಿಗೆ ತೆರಳಬೇಕಾಗಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಚಿಕ್ಕೋಡಿಯಲ್ಲಿ ಮಿಲಿಟರಿ ಕ್ಯಾಂಟೀನ್ ಮಂಜೂರು ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನೇಮಕ

ಚಿಕ್ಕೋಡಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ವಿಶೇಷವಾಗಿ ಮಹಿಳೆಯರು, ಗರ್ಭಿಣಿಯರು ಹಾಗೂ ಮಕ್ಕಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯಬೇಕು ಎಂಬ ಉದ್ದೇಶದಿಂದ ಆಸ್ಪತ್ರೆಯಲ್ಲಿ ಅಗತ್ಯ ಸಂಖ್ಯೆಯ ವೈದ್ಯರನ್ನು ನೇಮಕ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಬೇಸಿಗೆ ಹಾಗೂ ನೀರಿನ ಅಭಾವದ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಗತ್ಯವಿರುವ ಕಡೆಗಳಲ್ಲಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲು ಕ್ರಮ ವಹಿಸಲಾಗಿದ್ದು, ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ಆದ್ಯತೆಯಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಮಸೂದೆಗಳನ್ನು ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ವಿಪ್ ಜಾರಿಗೊಳಿಸಲಾಗಿದೆ. ಹೀಗಾಗಿ ನಾಳೆ ಸಂಸತ್ತಿನ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಿರೋಧ ಪಕ್ಷದ ನಾಯಕರನ್ನು ಒಡೆಯುವ ಹಾಗೂ ಅವರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನಗಳನ್ನು ಆಡಳಿತಾರೂಢ ಪಕ್ಷ ಮಾಡುತ್ತಿದೆ. ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಇಂತಹ ಪ್ರಯತ್ನಗಳು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು.

ಚಿಕ್ಕೋಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯಗಳ ಸುಧಾರಣೆ, ಆರೋಗ್ಯ ಸೇವೆ ಮತ್ತು ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ನಿರಂತರವಾಗಿ ಶ್ರಮಿಸಲಾಗುವುದು. ಅದರಲ್ಲೂ ಪ್ರತ್ಯೇಕ ಚಿಕ್ಕೋಡಿ ಜಿಲ್ಲೆ ರಚನೆಯ ಬೇಡಿಕೆಯನ್ನು ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸಲಾಗುವುದು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಯು.ಟಿ ಖಾದರ್ ಸ್ಪಷ್ಟನೆ

Spread the loveಶಿವಮೊಗ್ಗ: ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎಂಬ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಆರೋಗ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ