ಬೆಂಗಳೂರು: ಕೋವಿಡ್ 19ನಿಂದಾಗಿ ಸದ್ಯ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ.
ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.
ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ತಿಳಿಸಿದರು.