ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು.
ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದಿದ್ದಾರೆ.
ಈ ಬಗ್ಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಮಾತನಾಡಿದ್ದು, ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರಕರಣವನ್ನು ಸರ್ಕಾರ ಖಂಡಿಸುತ್ತಿದೆ, ಈ ಬಗ್ಗೆ ಗೃಹಸಚಿವರ ಹಾಗೂ ಸಿಎಂ ಯಡಿಯೂರಪ್ಪನವರ ಗಮನಕ್ಕೆ ತರಲಾಗಿದೆ. ನಾಳೆ ನಾನು ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದಿದ್ದಾರೆ.