Breaking News

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ

Spread the love

ಬೆಂಗಳೂರು: ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲಾತ್ಕಾರದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ. ಕೊರೊನಾ ರೋಗವನ್ನು ನಿಯಂತ್ರಿಸಲಾಗದೆ ಮಂಡಿ ಊರಿ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರ್ಕಾರ, ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿರುವುದು ದುರಂತ.

ಕೃಷಿಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಪ್ರಮುಖ ಮಸೂದೆಗಳ ಬಗ್ಗೆ ಉಭಯ ಸದನಗಳಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಮಸೂದೆಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೊಳಪಡಿಸಬೇಕು ಎಂಬ ವಿರೋಧಪಕ್ಷಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿರುವುದು ಯಾಕೆ? ದುರ್ಬಲರು, ಅಸಹಾಯಕರು ಮತ್ತು ಅಸಂಘಟಿತರಾಗಿರುವ ಶೇಕಡಾ 80ರಷ್ಟಿರುವ ಸಣ್ಣ ಮತ್ತು ಮಧ್ಯಮ ರೈತರಿಗೆ ಕೃಷಿಮಾರುಕಟ್ಟೆಯನ್ನು ಸರ್ಕಾರದ ನೆರವಿಲ್ಲದೆ ಸ್ವಯಂ ನಿಯಂತ್ರಿಸಲಾರರು. ಆ ಕೆಲಸ ಮಾಡುತ್ತಿದ್ದ ಎಪಿಎಂಸಿಯನ್ನು ನಾಶಮಾಡುವುದೆಂದರೆ ಪೂರ್ಣ ಕೃಷಿಕ್ಷೇತ್ರವನ್ನು ಮಣ್ಣುಪಾಲು ಮಾಡುವುದು.

ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆಯ ದುರುದ್ದೇಶ. ಇದು ನಮ್ಮ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರ ಬೆನ್ನು ಮುರಿಯುವ ಮನೆಹಾಳು ಕೆಲಸ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ