ಬೆಂಗಳೂರು,ಡಿ.9- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ತೀರ್ಮಾನಿಸಿರುವ ಕನ್ನಡಪರ ಸಂಘಟನೆಗಳು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಿದವು.
ಮರಾಠ ಅಭಿವೃದ್ಧಿ ನಿಗಮ ವಿರೋಸಿ ಡಿ.5ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಿಫಲಗೊಳಿಸುವ ಯತ್ನ ಮಾಡುವ ಮೂಲಕ ಸರ್ಕಾರ ಕನ್ನಡ ದ್ರೋಹ ಮಾಡಿದೆ. ಹೀಗಾಗಿ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಿದೆ ಎಂಬ ಹಿನ್ನೆಲೆಯಲ್ಲಿ ಸಭೆ ಸೇರಿದ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಶಿವರಾಮೇಗೌಡ, ಗಿರೀಶ್‍ಗೌಡ, ಮಂಜುನಾಥ್ ದೇವು ಮುಂತಾದವರು ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು ಬಂದ್ ಸಂದರ್ಭದಲ್ಲಿ 30 ಸಾವಿರಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಬಂಸಿ ತಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವ ನಡುವೆಯೂ ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು.
ಇಷ್ಟಕ್ಕೆ ನಮ್ಮ ಹೋರಾಟ ನಿಲ್ಲುವುದಿಲ್ಲ. ನಾವು ರಾಜ್ಯಾದ್ಯಂತ ಜೈಲ್ ಭರೋ ಚಳುವಳಿಯನ್ನು ನಡೆಸುತ್ತೇವೆ. ರೈಲು ತಡೆ, ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.