ಬೆಂಗಳೂರು: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೋಮವಾರದಿಂದ (ಜು. 5) ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಉಡುಪಿಯ ಕೃಷ್ಣ ಮಠ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ.
ಶೃಂಗೇರಿ ಶಾರದಾಂಬೆ ದೇಗುಲ, ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಂದಾರ್ತಿಯ ದುರ್ಗಾ ಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳದ ಮಂಜುನಾಥೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪ, ಸಂಗಮೇಶ್ವರ ದೇವಾಲಯ, ಬಾದಾಮಿಯ ಬನಶಂಕರಿ ದೇವಸ್ಥಾನ, ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನಗಳಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ದರ್ಶನಕ್ಕೆ ಬರುವ ಭಕ್ತರು ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯ ಎಂದು ಎಲ್ಲ ದೇವಸ್ಥಾನಗಳ ಸಮಿತಿಗಳು ತಿಳಿಸಿವೆ.
ಸದ್ಯಕ್ಕೆ ದರ್ಶನವಿಲ್ಲ: ಉಡುಪಿಯ ಕೃಷ್ಣಮಠದಲ್ಲಿ ಸದ್ಯ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿಲ್ಲ. ಒಂದು ವಾರ ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ಬಾಗಿಲು ತೆರೆಯಬೇಕೆ, ಬೇಡವೆ ಎಂಬ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಸವದತ್ತಿ ಯಲ್ಲಮ್ಮ ದೇವಸ್ಥಾನ- ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಕೆ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭಾನುವಾರ ಆದೇಶಿಸಿದ್ದಾರೆ.
ಯಲ್ಲಮ್ಮ ದೇವಸ್ಥಾನಕ್ಕೆ ನೆರೆಯ ಮಹಾರಾಷ್ಟ್ರದ ಭಕ್ತರು ಹೆಚ್ಚಾಗಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಸಲಾಗಿದೆ.