ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಿದ ಬಾಕಿ ಇರುವ 721 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಗುರುವಾರ ನಡೆದ ಸಂಪುಟ ಉಪ ಸಮಿತಿ ತೀರ್ಮಾನಿಸಿದ್ದು, 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಮಿತಿ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ, ಗೋಧಿಯನ್ನು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲಾಗಿತ್ತು. ಆದರೆ ಹಣ ಬಿಡುಗಡೆಯಾಗದೆ ಸಮಸ್ಯೆಯಾಗಿತ್ತು ಎಂದರು.
ಪ್ರಥಮ ಸಭೆ:
ರೈತರಿಗೆ ಬೆಂಬಲ ಬೆಲೆ ನೀಡುವ ಸಂಬಂಧ ಪ್ರಥಮ ಸಭೆ ನಡೆದಿದ್ದು ಕೃಷಿ ಸಚಿವರಾದ ಬಿ.ಸಿ. ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಪೌರಾಡಳಿತ
ಮತ್ತು ಸಕ್ಕರೆ ಸಚಿವ ಶಂಕರ್, ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಪಾಲ್ಗೊಂಡು ರೈತರಿಗಾಗುತ್ತಿರುವ ಸಮಸ್ಯೆಗಳು ಮತ್ತು ಪರಿಹಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.
ಇನ್ನು ವಿಳಂಬ ಆಗದು :
ಇನ್ನು ಮುಂದೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಮತ್ತು ರೈತರಿಗೆ ಹಣ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಲಾಗುವುದು. ಈ ಸಂಬಂಧ ಉಪ ಸಮಿತಿಯಲ್ಲಿ ಚರ್ಚಿಸಿ ಕೆಲವು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಂತಹ ಸಮಸ್ಯೆ ತಲೆದೋರದು. ಜುಲೈ 29ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ಕರೆಯಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಯಾವ ರೀತಿ ಬೆಂಬಲ ಬೆಲೆಯನ್ನು ನಿಗದಿ ಪಡಿಸ ಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳ ಲಾಗು ವುದು ಎಂದು ಸೋಮಶೇಖರ್ ತಿಳಿಸಿದರು.