ಬೆಂಗಳೂರು: ಬೆಳಗಾವಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಾಣಕ್ಕೆ ₹2 ಕೋಟಿ ವೆಚ್ಚ ಮಾಡಿದ ಬಳಿಕ ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶಿಸಿದೆ.
ಬೆಳಗಾವಿ ನಿವಾಸಿಗಳಾದ ನಾರಾಯಣ ಬೈರು ಸಾವಂತ್ ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು.
ಬೆಳಗಾವಿ ಪಾಲಿಕೆ ಆಯುಕ್ತರು ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹಣ ವೆಚ್ಚ ಮಾಡಿಲ್ಲ ಎಂದು ಹೇಳಲಾಗಿದೆ. ಆದರೆ, ಬೇರೆ ದಾಖಲೆಗಳಲ್ಲಿ ಹಣ ಖರ್ಚಾಗಿರುವುದು ಉಲ್ಲೇಖವಾಗಿದೆ. ಹೀಗಾಗಿ, ಈ ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.
ಅಲರವಾಡದಿಂದ ಹಲಗೆ ಗ್ರಾಮಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ಕಾರಣ ಒಳಗೊಂಡ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಪೀಠ ಸೂಚಿಸಿತು.
Laxmi News 24×7