ಬೆಂಗಳೂರು, : ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೊದಲ ಸಲ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ ಅರುಣ್ ಸಿಂಗ್ ಭೇಟಿಗೆ ಮಹತ್ವ ಬಂದಿದೆ. ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಜೊತೆಗೆ ಉಪ ಚುನಾವಣೆಯಲ್ಲಿ ಸೋಲಿನ ಬಗ್ಗೆಯೂ ಮಹತ್ವದ ಮಾಹಿತಿಯನ್ನು ಅರುಣ್ ಸಿಂಗ್ ಕಲೆ ಹಾಕಲಿದ್ದಾರೆ ಎಂಬ ಮಾಹಿತಿಯಿದೆ.
ನಾಯಕತ್ವ ಬದಲಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಮಿಶ್ರ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿಯೆ ಬಿಜೆಪಿಗೆ ಹಿನ್ನಡೆಯಾಗಿದೆ. ಅಷ್ಟೇ ಅಲ್ಲ ಹಾನಗಲ್ ಉಪ ಚುನಾವಣೆ ಸೋಲಿನ ಹಿಂದೆ ಕೆಲ ಬಿಜೆಪಿ ನಾಯಕರೂ ಇದ್ದಾರೆ ಎಂಬ ಚರ್ಚೆಗಳು ಆರಂಭವಾಗಿರುವುದು ಕೂಡ ಹೈಕಮಾಂಡ್ ಗಮನಕ್ಕೆ ಬಂದಿದೆ ಎಂಬ ಮಾಹಿತಿಯಿದೆ.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವಿಚಾರ ಮುನ್ನೆಲೆಗೆ ಬಂದಿರುವುದು ಕುತೂಹಲ ಮೂಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಅರುಣ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಹಾಗೂ ರಾಜ್ಯಾಧ್ಯಕ್ಷರನ್ನು ಬಿಜೆಪಿ ಬದಲಾವಣೆ ಮಾಡಲಿದೆಯಾ? ಮುಂದಿದೆ ಮಾಹಿತಿ!
ಉಪ ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ನಿಲುವು!
ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಅರುಣ್ ಸಿಂಗ್, “ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ನಾವು ಭರ್ಜರಿ ಜಯಗಳಿಸಿದ್ದೇವೆ. ಆದರೆ ಬಹಳಷ್ಟು ಪ್ರಯತ್ನ ಮಾಡಿದರು ಕಡಿಮೆ ಮತಗಳ ಅಂತರದಿಂದ ನಾವು ಹಾನಗಲ್ ಉಪ ಚುನಾವಣೆಯಲ್ಲಿ ಸೋತಿದ್ದೇವೆ. ಹಾನಗಲ್‌ನಲ್ಲಿ ಪಕ್ಷದ ಕಾರ್ಯಕರ್ತರು ವಿಶೇಷ ಶ್ರಮವಹಿಸಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವರು ಮತ್ತು ಪಕ್ಷದ ಮುಖಂಡರು ಹೆಚ್ಚಿನ ಶ್ರಮ ವಹಿಸಿದ್ದಾರೆ. ಆದರೂ ನಾವು ಕಡಿಮೆ ಮತಗಳ ಅಂತರದಿಂದ ಸೋತಿದ್ದೇವೆ” ಎಂದು ವಿಶ್ಲೇಷಿಸಿದ್ದಾರೆ.
ಬೊಮ್ಮಾಯಿ, ಕಟೀಲ್ ಬದಲಾಗುತ್ತಾರಾ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಅರುಣ್ ಸಿಂಗ್, “ಅದೆಲ್ಲ ಕೇವಲ ಊಹೆ ಮಾತ್ರ. ಅದು ಕಾಂಗ್ರೆಸ್ ಧ್ವನಿಯಷ್ಟೇ. ಕಾಂಗ್ರೆಸ್ ಅಂಥ ವದಂತಿಗಳನ್ನು ಹಬ್ಬಿಸುತ್ತಿದೆ. ಕಾಂಗ್ರೆಸ್ ಪಕ್ಷವು ಜನರ ಪರವಾಗಿ ಕೆಲಸ ಮಾಡುತ್ತಿಲ್ಲ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರು ಇಂಥ ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಕಟೀಲ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ” ಸ್ಪಷ್ಟನೆ ನೀಡಿದ್ದಾರೆ.
ಹಿಂದೆ ಯಡಿಯೂರಪ್ಪ ಬದಲಾವಣೆ ನಿರಾಕರಿಸಿದ್ದ ಸಿಂಗ್!
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ಬಳಿಕವೂ ಬದಲಾವಣೆ ಚರ್ಚೆ ಮುಂದುವರೆದಿದೆ. ಈ ಹಿಂದೆ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದರು. ಅದಾದ ಎರಡು ದಿನಗಳಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದರು. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ ಎಂಬ ಚರ್ಚೆಯೂ ರಾಜ್ಯ ಬಿಜೆಪಿಯಲ್ಲಿ ನಡೆದಿದೆ. ನಾಳೆ ಮಂಗಳವಾರ ಹಾಗೂ ನಾಡಿದ್ದು ಬುಧವಾರ ಬೆಂಗಳೂರಿನಲ್ಲಿ ವಿವಿಧ ಸಭೆಗಳನ್ನು ಅರುಣ್ ಸಿಂಗ್ ಮಾಡಲಿದ್ದಾರೆ. ಆ ಬಗ್ಗೆ ಮಾಹಿತಿ ಮುಂದಿದೆ.
ಬಿಬಿಎಂಪಿ ಚುನಾವಣಾ ಸಿದ್ಧತಾ ಸಭೆ!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ನಾಳೆ ಮಂಗಳವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. ನಂತರ ಪ್ರಮುಖವಾಗಿ ಬಿಬಿಎಂಪಿ ಚುನಾವಣಾ ಸಿದ್ಧತಾ ಸಭೆ, ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬುಧವಾರ ಬೆಳಗ್ಗೆ ಅರುಣ್ ಸಿಂಗ್ ದೆಹಲಿಗೆ ಹಿಂತಿರುಗಲಿದ್ದಾರೆ. ಉಪ ಚುನಾವಣೆ ಫಲಿತಾಂಶ ಹಾಗೂ ಮುಂದಿನ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಅವರ ರಾಜ್ಯ ಭೇಟಿಗೆ ಮಹತ್ವ ಬಂದಿದೆ.