ಕೋಲಾರ: ಉಮ್ರಾ ಚಾರಿಟಬಲ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸಮಾಜ ಸೇವಕ ಕೆಜಿಎಫ್ ಬಾಬು ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಸ್ಥಳೀಯವಾಗಿ ಕಾಂಗ್ರೆಸ್ ಪಾಳಯದಲ್ಲಿ ಮಹತ್ವ ಪಡೆದುಕೊಂಡಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಉತ್ಸುಕರಾಗಿರುವ ಕೆಜಿಎಫ್ ಬಾಬು ಅವರು ಸುರ್ಜೇವಾಲ ಅವರನ್ನು ಭೇಟಿಯಾಗಿರುವುದು ರಾಜಕೀಯವಾಗಿ ಕುತೂಹಲ ಮೂಡಿಸಿದೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಬಾಬು ಮತ್ತು ಸುರ್ಜೇವಾಲ ಅವರ ಭೇಟಿಯು ಕೈ ಪಾಳಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಬಾಬು ಅವರು ತಾವು ಕೋಲಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವಾ ಕಾರ್ಯಗಳ ಬಗ್ಗೆ ಸುರ್ಜೇವಾಲ ಅವರಿಗೆ ಮಾಹಿತಿ ನೀಡಿದ್ದಾರೆ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಅವಕಾಶ ನೀಡಿದರೆ ಖಂಡಿತ ಗೆಲುವು ಸಾಧಿಸುತ್ತೇನೆ ಎಂದು ಹೇಳಿರುವ ಬಾಬು ತಮ್ಮನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಸುರ್ಜೇವಾಲ ಅವರಿಗೆ ಮನವಿ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
‘ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಎಂಬ ಭೇದ ಭಾವವಿಲ್ಲದೆ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರಿಗೆ ಆರ್ಥಿಕ ನೆರವು ನೀಡುತ್ತಿದ್ದೇನೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾ ಪ್ರೋತ್ಸಾಹಧನ ನೀಡುತ್ತಿದ್ದು, ಜನಪರವಾಗಿ ಕೆಲಸ ಮಾಡುತ್ತಿದ್ದೇನೆ. ಜನಸೇವೆಗಾಗಿಯೇ ವರ್ಷಕ್ಕೆ ₹ 35 ಕೋಟಿ ಮೀಸಲಿಟ್ಟಿದ್ದೇನೆ. ಕ್ಷೇತ್ರದ 2.40 ಲಕ್ಷ ಜನರ ಮನೆ ಬಾಗಿಲಿಗೆ ಹಣಕಾಸು ನೆರವು ಕಲ್ಪಿಸುವ ಯೋಜನೆಯಿದೆ’ ಎಂದು ಬಾಬು ಅವರು ಸುರ್ಜೇವಾಲ ಅವರ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಭೇಟಿ ಭರವಸೆ: ಬಾಬುರ ಸಮಾಜ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸುರ್ಜೇವಾಲ, ಸದ್ಯದಲ್ಲೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವಂತೆ ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.