ಬೆಳಗಾವಿ: ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ಇಲ್ಲಿನ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರುಕ್ಮಿಣಿ ನಗರದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿದರು.
ಸಮುದಾಯ ಭವನ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಜೂರಾದ ಮನೆಗಳು ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪರಿಶೀಲಿಸಿದರು.
ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.
ವಸತಿ ಗೃಹಗಳ ನಿರ್ಮಾಣ ಹಾಗೂ ವಿವಿಧ ಕಾಮಗಾರಿಗಳ ಕುರಿತು ಮಂಜೂರಾದ ವೆಚ್ಚ ಹಾಗೂ ಖರ್ಚುಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸೂಕ್ತ ಮಾಹಿತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ‘ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಜನರ ಸಮಸ್ಯೆಗಳನ್ನು ಆಲಿಸಿದ ಅವರು, ಶೀಘ್ರವೇ ಪರಿಹಾರ ಒದಗಿಸುವ ಭರವಸೆ ನೀಡಿದರು.
ಶಾಸಕರಾದ ಅನಿಲ ಬೆನಕೆ, ಮಹೇಶ ಕುಮಠಹಳ್ಳಿ, ಮಹಾಂತೇಶ ದೊಡ್ಡಗೌಡರ ಹಾಗೂ ಅಧಿಕಾರಿಗಳು ಇದ್ದರು.