ಬೆಳಗಾವಿ, ಡಿ.23- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹೊಸದಾಗಿ 100 ಹಾಸ್ಟೇಲ್‍ಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುತ್ತಿರುವುದಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ವಿಧಾನ ಪರಿಷತ್ ನ ಶೂನ್ಯ ವೇಳೆಯಲ್ಲಿ ಸದಸ್ಯ ಚಿದಾನಂದಗೌಡ ಅವರು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಸಚಿವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶ ನೀಡಲಾಗುತ್ತಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅಗತ್ಯದಷ್ಟು ಹಾಸ್ಟೇಲ್ನ ಸ್ಥಳಾವಕಾಶದ ಕೊರತೆ ಇದೆ ಎಂದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ರಾಜ್ಯದಲ್ಲಿ ಹೊಸದಾಗಿ 100 ಹಾಸ್ಟೇಲ್ ಗಳ ನಿರ್ಮಾಣಕ್ಕೆ ಅನುಮತಿ ನೀಡಲು ವಾರದೊಳಗೆ ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹೊಸ ಹಾಸ್ಟೇಲ್ಗಳಿಂದ ರಾಜ್ಯದ 12 ಸಾವಿರ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.