ಸುವರ್ಣ ಸೌಧ : ಮತಾಂತರ ನಿಷೇಧ ಕಾಯ್ದೆ ಕುರಿತು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾವಿಸಿ ಮಾತನಾಡಿದ್ದು, ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ ಎಂದಿದ್ದಾರೆ.
‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ಸಚಿವ ಸಂಪುಟದ ಮುಂದೆ ತರುವಂತೆ ನಾನು ಸಹಿ ಹಾಕಿದ್ದೆ. ಆದರೆ ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ, ಕರಡು ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ’ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
‘ಮತ್ತೊಂದು ಪ್ರಮುಖ ಅಂಶವೆಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಹೇಗಾಗುತ್ತದೆ?’ ಎಂದು ಪ್ರಶ್ನಿಸಿದರು.
‘ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರಲು ನಾವು ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡುಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3 ರಲ್ಲಿ ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ’ ಎಂದರು.
‘
‘ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡುತ್ತೇನೆ’ಎಂದು ಕಿಡಿ ಕಾರಿದರು.