ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ (Vidhan Soudha ), ವಿಕಾಸಸೌಧ ( Vikas Soudha ) ಹಾಗೂ ಬಹುಮಹಡಿ ಕಟ್ಟಡಗಳಿಗೆ ( MS Building ) ಸಾರ್ವಜನಿಕರ ಪ್ರವೇಶಕ್ಕೆ ( Public Entry ) ರಾಜ್ಯ ಸರ್ಕಾರ ( Karnataka Government ) ನಿರ್ಬಂಧ ವಿಧಿಸಿದೆ.
2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಚಿವಾಲಯದ ಕಟ್ಟಡಗಳಿಗೆ, ಮುಖ್ಯಮಂತ್ರಿಗಳ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಗೆ ಮಾತ್ರವೇ ಆಗಮಿಸುವ ಇಲಾಖಾ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರುಗಳು 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿದ್ದರೇ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಈ ತಕ್ಷಣದಿಂದ ಜಾರಿಗೆ ಬರುವಂತೆ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಿಗೆ ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು 2ನೇ ಡೋಸ್ ಲಸಿಕೆಯನ್ನು ಪಡೆದಿರುವ ಪ್ರಮಾಣಪತ್ರವನ್ನು ಹೊಂದಿ, ಕಚೇರಿಗೆ ಆಗಮಿಸಬೇಕು. ಇಲ್ಲದಿದ್ದಲ್ಲಿ ಅಂತಹವರ ಗೈರು ಹಾಜರಿಯನ್ನು ವೇತನ ರಹಿತ ರಜೆಯೆಂದು ಪರಿಗಣಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.